ರಾಷ್ಟ್ರಪತಿ ಚುನಾವಣೆ – 8 ರಾಜ್ಯಗಳ ಸಿಎಂಗೆ ಪತ್ರ ಬರೆದ ಮಮತ ಬ್ಯಾನರ್ಜಿ…..
ರಾಷ್ಟ್ರಪತಿ ಚುನಾವಣೆಗೂ ಮುನ್ನ ಪ್ರತಿಪಕ್ಷಗಳನ್ನು ಮತ್ತೊಮ್ಮೆ ಒಗ್ಗೂಡಲು ಸಿದ್ಧತೆಗಳು ಆರಂಭವಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 8 ರಾಜ್ಯಗಳ ಸಿಎಂಗಳು ಸೇರಿದಂತೆ ಪ್ರತಿಪಕ್ಷಗಳ 22 ನಾಯಕರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಜೂನ್ 15 ರಂದು ನಡೆಯಲಿರುವ ಜಂಟಿ ಸಭೆಗೆ ಹಾಜರಾಗುವಂತೆ ಎಲ್ಲಾ 22 ನಾಯಕರಿಗೆ ಆಹ್ವಾನ ನೀಡಲಾಗಿದೆ. ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಈ ಸಭೆಯನ್ನು ಕರೆಯಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಅವರನ್ನ ಕಣಕ್ಕಿಳಿಸುವ ಸಾಧ್ಯತೆ
ಶುಕ್ರವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಡಿಎಂಕೆ, ಸಿಪಿಐ, ಸಿಪಿಐ(ಎಂ) ಮತ್ತು ಆಮ್ ಆದ್ಮಿ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿದರು. ವರದಿಗಳ ಪ್ರಕಾರ, ಈ ಸಂವಾದದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳಿಗೆ ಸಾಮಾನ್ಯ ಅಭ್ಯರ್ಥಿ ಮಾಡುವ ಬಗ್ಗೆ ಮಾತನಾಡಿದರು. ಈ ವಿಚಾರವಾಗಿ ಖರ್ಗೆ ಅವರು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.
ಮಮತಾ ಬ್ಯಾನರ್ಜಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕೇರಳ ಸಿಎಂ ಪಿಣರಾಯಿ ವಿಜಯನ್, ಒಡಿಶಾ ಸಿಎಂ ನವೀನ್ ಪಟ್ನಾಯಕ್, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಪಂಜಾಬ್ ಸಿಎಂ ಭಗವಂತ್ ಸೇರಿದಂತೆ 22 ನಾಯಕರಿಗೆ ಪತ್ರ ಬರೆದಿದ್ದಾರೆ.