ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿತ ಕಂಡಿದೆ. ಆದ್ರೆ ಕೇಂದ್ರ ಸರ್ಕಾರ ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ಹೆಚ್ಚಿಸಿರೋದನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕಚ್ಚಾ ತೈಲ ದರದಲ್ಲಿ ಉಂಟಾಗಿರುವ ಕುಸಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಿ ಎಂದು ಕೇಳಿದರೆ, ನಮ್ಮ ಜಾಣ ಪ್ರಧಾನಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕು ಹೆಚ್ಚಿಸಿದ್ದಾರೆ,’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. 
ಅಲ್ಲದೆ ತೈಲ ಬೆಲೆ ಕುಸಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸದ ಸರ್ಕಾರದ ಕ್ರಮದ ಕುರಿತ ಪ್ರಶ್ನೆಗಳನ್ನು ನಿರ್ಲಕ್ಷಿಸುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿಡಿಯೋವನ್ನು ರಾಹುಲ್ ಟ್ವೀಟ್ ಮಾಡಿದ್ದಾರೆ.
https://twitter.com/i/status/1239103740835008512
ಇನ್ನು ಮೂರು ದಿನಗಳ ಹಿಂದೆ ರಾಹುಲ್ ಗಾಂಧಿ ಟ್ವೀಟ್ ನಲ್ಲಿ, ‘ಮಧ್ಯಪ್ರದೇಶದಲ್ಲಿ ಚುನಾಯಿತ ಸರ್ಕಾರವೊಂದನ್ನು ಕೆಡುವುದರಲ್ಲಿ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಶೇ. 35ರಷ್ಟು ದರ ಕುಸಿದಿರುವುದು ಗೊತ್ತೇ ಆಗಿಲ್ಲ. ತೈಲ ದರ ಕುಸಿತವನ್ನು ಪ್ರಧಾನಿ ಗ್ರಾಹಕರಿಗೆ ವರ್ಗಾಯಿಸಬೇಕು. ಪೆಟ್ರೋಲ್ ದರವನ್ನು 60 ಗೆ ನಿಗದಿ ಮಾಡಬೇಕು,’ ಎಂದು ಆಗ್ರಹಿಸಿದ್ದರು.









