ನವದೆಹಲಿ: ಹರಿಣಗಳ ವಿರುದ್ಧ ಭರ್ಜರಿ ಜಯ ಸಾಧಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ನಮ್ಮ ಕ್ರಿಕೆಟ್ ತಂಡ ಮತ್ತೊಮ್ಮೆ ವಿಜಯಶಾಲಿಯಾಗಿದೆ! ದಕ್ಷಿಣ ಆಫ್ರಿಕಾ ವಿರುದ್ಧ ಅಮೋಘ ಪ್ರದರ್ಶನ ನೀಡಿದ ತಂಡಕ್ಕೆ ನನ್ನ ಅಭಿನಂದನೆಗಳು. ಉತ್ತಮ ತಂಡದ ಕೆಲಸ. ಸುಂದರವಾದ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿಗೆ (Virat Kohli) ತಂಡವು ಹುಟ್ಟುಹಬ್ಬದ ಉಡುಗೊರೆ ನೀಡಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿ, ಸಂತಸ ವ್ಯಕ್ತಪಡಿಸಿದ್ದಾರೆ.
ಹುಟ್ಟು ಹಬ್ಬದ ದಿನವೇ ಶತಕ ಸಿಡಿಸುವುದರ ಮೂಲಕ ಕಿಂಗ್ ಕೊಹ್ಲಿ, ಕ್ರಿಕೆಟ್ ದೇವರ ಸಾಧನೆ ಸರಿಗಟ್ಟಿದ್ದಾರೆ. ಸಚಿನ್ ತೆಂಡೂಲ್ಕರ್ ಅವರ 49 ಶತಕಗಳ ದಾಖಲೆಯನ್ನು ಸರಿಗಟ್ಟಿದರು. ಹೀಗಾಗಿ ಈ ಪಂದ್ಯ ಭಾರತೀಯ ಕ್ರಿಕೆಟ್ ಆಟಗಾರರು ಹಾಗೂ ಅಭಿಮಾನಿಗಳ ಪಾಲಿಗೆ ಸ್ಮರಣೀಯವಾಗಿದೆ.
ವಿರಾಟ್ ಕೊಹ್ಲಿ (Virat Kohli), ಶ್ರೇಯಸ್ ಅಯ್ಯರ್ ಶತಕದ ಜೊತೆಯಾಟ ಹಾಗೂ ರವೀಂದ್ರ ಜಡೇಜಾ (Ravindra Jadeja) ಸ್ಪಿನ್ ಜಾದುವಿನಿಂದ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 243 ರನ್ಗಳ ಭರ್ಜರಿ ಜಯ ಸಾಧಿಸಿದೆ.