ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧಾನಪರಿಷತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಅವಹೇಳನಕಾರಿ ಹಾಗೂ ಅಸಂಸದೀಯ ಪದಗಳನ್ನು ಬಳಸಿ ಮಾತನಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರವೇ ದ್ವೇಷ ಭಾಷಣ ನಿಯಂತ್ರಣ ಕಾಯ್ದೆಯನ್ನು ಎರಡೂ ಸದನಗಳಲ್ಲಿ ಮಂಡಿಸಿ ಅಂಗೀಕಾರ ಪಡೆದಿದೆ. ಅಂತಹ ಕಾನೂನು ಜಾರಿಗೆ ತಂದ ಸರ್ಕಾರದ ಸಚಿವರೇ ಸದನದಲ್ಲಿ ಅಸಂಯಮಿತ ಮಾತುಗಳನ್ನು ಆಡಿರುವುದು ಅತ್ಯಂತ ಖಂಡನೀಯ ಎಂದು ಕಾರಜೋಳ ಕಿಡಿಕಾರಿದರು. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಆ ಕಾನೂನಿನಡಿ ಮೊದಲನೇ ಅಪರಾಧಿಯಾಗುತ್ತಾರೆ ಎಂದು ವ್ಯಂಗ್ಯವಾಡಿದರು.
ಪ್ರಿಯಾಂಕ್ ಖರ್ಗೆ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ ಕಾರಜೋಳ, ಸಚಿವ ಸ್ಥಾನದಲ್ಲಿರುವವರು ಸಂಸತ್ ಸಂಪ್ರದಾಯ ಹಾಗೂ ಸಂವಿಧಾನಾತ್ಮಕ ಮೌಲ್ಯಗಳನ್ನು ಗೌರವಿಸಬೇಕು ಎಂದರು. ಈ ವಿಚಾರ ರಾಜ್ಯ ರಾಜಕಾರಣದಲ್ಲಿ ಮತ್ತಷ್ಟು ರಾಜಕೀಯ ಗದ್ದಲಕ್ಕೆ ಕಾರಣವಾಗುವ ಸಾಧ್ಯತೆ ಇದೆ.








