ಬೆಂಗಳೂರು: ರಾಜ್ಯಸಭಾ ಚುನಾವಣೆ ಸಂಭ್ರಮಾಚರಣೆ ವೇಳೆ ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 153 ಬಿ(ರಾಷ್ಟ್ರೀಯ ಸಮಗ್ರತೆ ಧಕ್ಕೆ ನೀಡಿದ ಹೇಳಿಕೆ) 505 (ಸಾರ್ವಜನಿಕ ಕೇಡಿಗೆ ಕಾರಣವಾಗುವ ಹೇಳಿಕೆ) ಆರೋಪದ ಅಡಿ ಅಪರಿಚಿತ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ.
ಅಲ್ಲದೇ, ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸರ್ಕಾರ ಈಗ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ನಾಸೀರ್ ಹುಸೇನ್ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಮಂಗಳವಾರ ಸಂಜೆ 6 ಗಂಟೆಯಿಂದ 6:30 ರ ಸಮಯದಲ್ಲಿ ಯಾರೋ ಒಬ್ಬ ವ್ಯಕ್ತಿ ವಿಧಾನಸೌಧದ ಪೂರ್ವ ದ್ವಾರದ ಹತ್ತಿರ ಪಾಕಿಸ್ತಾನ ಜಿಂದಬಾದ್ ಎಂದು ಘೋಷಣೆ ಕೂಗಿದ ಎಂಬ ಸುದ್ದಿ ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಬರುತ್ತಿದೆ. ಪೂಟೇಜ್ ಸಂಗ್ರಹಿಸಿ ಆರೋಪಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರುತ್ತೇನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.