ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್’ಗೆ ನಿರ್ದೇಶನ ನೀಡಿದ್ದಾರೆ.
ಮೆಟ್ರೋ ಸೇವೆಗಳಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆಗಳ ಕಾರಣಗಳನ್ನು ಪರಿಶೀಲಿಸಿ, ಇದುವರೆಗೆ ಕೈಗೊಂಡಿರುವ ಪರಿಹಾರ ಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೈಗೊಳ್ಳಲಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಈ ಬೆಳವಣಿಗೆಗೆ ಮುನ್ನ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಕಳೆದ ಮೂರು ವರ್ಷಗಳಲ್ಲಿ ನಮ್ಮ ಮೆಟ್ರೋದಲ್ಲಿ ಸಂಭವಿಸಿದ ಸುಮಾರು 20 ಸೇವಾ ವ್ಯತ್ಯಯಗಳ ಕುರಿತು ದಾಖಲೆಗಳೊಂದಿಗೆ ದೂರು ಸಲ್ಲಿಸಿದ್ದರು.
ಈ ಆದೇಶ ಹೊರಬಿದ್ದಿರುವ ವಿಚಾರವನ್ನು ತೇಜಸ್ವಿ ಸೂರ್ಯ ತಮ್ಮ ಸಾಮಾಜಿಕ ಜಾಲತಾಣ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ತನಿಖೆಯ ಮೂಲಕ ಮೆಟ್ರೋ ಸೇವೆಗಳ ವಿಶ್ವಾಸಾರ್ಹತೆ, ಸುರಕ್ಷತೆ ಮತ್ತು ಪ್ರಯಾಣಿಕರ ಅನುಕೂಲತೆಯನ್ನು ಇನ್ನಷ್ಟು ಸುಧಾರಿಸುವ ಕ್ರಮಗಳ ಬಗ್ಗೆ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.








