ಮುಂಬೈ: ಪ್ರತಿಭಟನಾಕಾರರು ಶಾಸಕರ ಮನೆಗೆ ಬೆಂಕಿ ಹಚ್ಚಿರುವ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿಗೆ (Maratha Reservation) ಆಗ್ರಹಿಸಿ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನಾಕಾರರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (NCP) ಶಾಸಕ ಪ್ರಕಾಶ್ ಸೋಲಂಕೆ (Prakash Solanke) ಅವರ ಬಂಗಲೆಗೆ ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಆಸ್ತಿ ಸಂಪೂರ್ಣವಾಗಿ ನಾಶವಾಗಿದೆ.
ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಆವರಿಸಿದೆ. ಮರಾಠ ಹೋರಾಟಗಾರ ಮನೋಜ್ ಜರಂಗೆ ಪಾಟೀಲ್ ಅವರ ಉಪವಾಸ ಸತ್ಯಾಗ್ರಹದ ಕುರಿತು ಸೋಲಂಕೆ ಟೀಕಿಸಿದ್ದರು. ಇದನ್ನು ಮಕ್ಕಳ ಆಟ ಎಂದು ಕರೆದಿದ್ದರು. ಈ ಆಡಿಯೋ ವೈರಲ್ ಆದ ನಂತರ ಈ ಕೃತ್ಯ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಬೆಂಕಿ ಹಚ್ಚಿದ್ದ ಸಂದರ್ಭದಲ್ಲಿ ನಾನು ಮನೆಯಲ್ಲಿಯೇ ಇದ್ದೆ. ಅದೃಷ್ಟವಶಾತ್ ಕುಟುಂಬದ ಸದಸ್ಯರು ಹಾಗೂ ಸಿಬ್ಬಂದಿಗೆ ಯಾವುದೇ ಗಾಯಗಳಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದೇವೆ. ಸಾಕಷ್ಟು ಆಸ್ತಿ ಹಾನಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.








