ಪುತ್ತೂರು ಸರ್ಕಾರಿ ಆಸ್ಪತ್ರೆ ಇನ್ನು ಮುಂದೆ ಕೋವಿಡ್ ಆಸ್ಪತ್ರೆ
ಪುತ್ತೂರು, ಜುಲೈ 1: ಮುಂದಿನ ವಾರದಿಂದ ಪುತ್ತೂರು ಸರ್ಕಾರಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.
ಆರಂಭದಲ್ಲಿ ವಿದೇಶದಿಂದ ಹಿಂತಿರುಗಿದವರಲ್ಲಿ ಮಾತ್ರ ಕೊರೊನಾ ಸೋಂಕು ಪತ್ತೆಯಾಗಿದ್ದು, ಇದೀಗ ಪುತ್ತೂರು ವಿಧಾನ ಸಭಾ ವ್ಯಾಪ್ತಿಯಲ್ಲೂ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಿದೆ. ಹಾಗಾಗಿ ಈ ಭಾಗದ ಕೊರೊನಾ ಪೀಡಿತರಿಗೆ ಇಲ್ಲಿಯೇ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲು ನಿರ್ಧರಿಸಲಾಗಿದೆ ಎಂದು ಮಠಂದೂರು ಮಾಹಿತಿ ನೀಡಿದ್ದಾರೆ.
ಇತ್ತೀಚೆಗಿನ ದಿನಗಳಲ್ಲಿ ಮಾರಕ ಸೋಂಕು ಕೊರೊನಾ ಪುತ್ತೂರು ವಿಧಾನ ಸಭಾ ವ್ಯಾಪ್ತಿಯಲ್ಲೂ ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲು ವಿವಿಧ ಇಲಾಖೆಗಳ ಪ್ರಮುಖರು, ಧಾರ್ಮಿಕ ಮುಖಂಡರೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಸಂಗ್ರಹಿಸಿ ಜಿಲ್ಲಾಡಳಿತದ ಮುಂದಿರಿಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಇಲ್ಲಿಯವರೆಗೆ ಪುತ್ತೂರು ಮತ್ತು ಕಡಬ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 22 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸುಮಾರು 50 ಮಂದಿ ಕ್ವಾರಂಟೈನ್ ನಲ್ಲಿದ್ದಾರೆ.








