ಮಂಗಳೂರು : ಪುತ್ತೂರಿನಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಬಿಜೆಪಿ ಟಿಕೆಟ್ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಪಕ್ಷೇತರರಾಗಿ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ.
ನಿನ್ನೆ ಬಿಜೆಪಿ ಹೈಕಮಾಂಡ್ 189 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಪುತ್ತೂರ ಕ್ಷೇತ್ರಕ್ಕೆ ಆಶಾ ತಿಮ್ಮಪ್ಪಗೌಡ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಹೀಗಾಗಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಅವರಿಗೆ ತೀವ್ರ ಅಸಮಾಧಾನವಾಗಿದೆ.
ಈ ಹಿನ್ನೆಲೆಯಲ್ಲಿ ಪುತ್ತೂರಿನ ಸಾಲ್ಮರದಲ್ಲಿನ ಖಾಸಗಿ ಹಾಲ್ ನಲ್ಲಿ ಅರುಣ್ ಕುಮಾರ್ ಅವರ ಅಭಿಮಾನಿಗಳು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ಸಭೆ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಅರುಣ್ ಕುಮಾರ್ ಅವರಿಗೆ ಪಕ್ಷೇತರರಾಗಿ ಕಣಕ್ಕೆ ಇಳಿಯುವಂತೆ ಒತ್ತಾಯ ಮಾಡಿದ್ದಾರೆ. ಈ ಕುರಿತು ಕುಲಂಕುಶವಾಗಿ ಚರ್ಚಿಸಿ, ನಿರ್ಧಾರ ಪ್ರಕಟಿಸುವುದಾಗಿ ಅರುಣ್ ಕುಮಾರ್ ಹೇಳಿದ್ದಾರೆ. ಸದ್ಯ ಕಾರ್ಯಕರ್ತರ ಒತ್ತಾಯ ನೋಡಿದರೆ, ಅರುಣ್ ಕುಮಾರ್ ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ.








