226 ತಾಲೂಕುಗಳಲ್ಲಿ ಬರದ ಛಾಯೆ, 861 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ; ಜನರ ಸಂಕಷ್ಟ ಬದಿಗಿಟ್ಟು ವಿದೇಶ ಪ್ರವಾಸಕ್ಕೆ ಆದ್ಯತೆ ಏಕೆ?
ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದ್ದರೂ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರ ಸಂಕಷ್ಟಕ್ಕೆ ಸ್ಪಂದಿಸುವ ಬದಲು ಜಪಾನ್ ಪ್ರವಾಸದಲ್ಲಿ ನಿರತರಾಗಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ 226 ತಾಲೂಕುಗಳು ಬರಗಾಲದ ಸಂಕಷ್ಟ ಎದುರಿಸುತ್ತಿದ್ದು, 861 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ತಲೆದೋರಿದೆ. ತುಮಕೂರು, ಕಲಬುರಗಿ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಜನರು ಒಂದು ಕೊಡ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಗಂಭೀರ ಸಂದರ್ಭದಲ್ಲಿ ರಾಜ್ಯದಲ್ಲೇ ಇದ್ದು ಜನರ ಬಾಯಾರಿಕೆ ನೀಗಿಸಲು ಕ್ರಮ ಕೈಗೊಳ್ಳಬೇಕಾದ ಮುಖ್ಯಮಂತ್ರಿ ವಿದೇಶ ಪ್ರವಾಸಕ್ಕೆ ಆದ್ಯತೆ ನೀಡಿರುವುದು ಖಂಡನೀಯ ಎಂದು ಅವರು ಟೀಕಿಸಿದ್ದಾರೆ.
ರಾಜ್ಯದಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಸರ್ಕಾರ ಕೊರೆಸಿರುವ ನೂರಾರು ಕೊಳವೆಬಾವಿಗಳು ನೀರಿಲ್ಲದೆ ವಿಫಲವಾಗುತ್ತಿವೆ. ಇಂತಹ ಗ್ರಾಮಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು, ಟ್ಯಾಂಕರ್‌ಗಳ ಮೂಲಕ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವುದು ಸರ್ಕಾರದ ಜವಾಬ್ದಾರಿ. ಆದರೆ, ಅಗತ್ಯ ಅನುದಾನ ಬಿಡುಗಡೆ ಮಾಡದೆ ಗ್ರಾಮೀಣ ಜನರನ್ನು ಸಂಕಷ್ಟಕ್ಕೆ ತಳ್ಳಲಾಗಿದೆ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ.
ಒಂದೆಡೆ ಹಳ್ಳಿಗಳಲ್ಲಿ ಜನರು ಕುಡಿಯುವ ನೀರಿಲ್ಲದೆ ಒದ್ದಾಡುತ್ತಿದ್ದರೆ, ಮತ್ತೊಂದೆಡೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಪಾನ್ ಪ್ರವಾಸದ ಸಂಭ್ರಮ. ಜನರ ಬವಣೆ ಕೇಳುವವರಿಲ್ಲದ ಈ ಸಂದರ್ಭದಲ್ಲಿ ವಿದೇಶ ಪ್ರವಾಸ ಕೈಗೊಳ್ಳುವ ಮೂಲಕ ಮುಖ್ಯಮಂತ್ರಿಗಳು ನಾಡಿನ ಜನತೆಗೆ ಯಾವ ಸಂದೇಶ ನೀಡಲು ಹೊರಟಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ರೋಮ್ ಹೊತ್ತಿ ಉರಿಯುವಾಗ ನೀರೋ ಪಿಟೀಲು ಬಾರಿಸುತ್ತಿದ್ದಂತೆ, ಕರ್ನಾಟಕ ಬರಗಾಲ ಮತ್ತು ಜಲಸಂಕಷ್ಟದಿಂದ ನಲುಗುತ್ತಿರುವಾಗ ಮುಖ್ಯಮಂತ್ರಿ ವಿದೇಶ ಪ್ರವಾಸದಲ್ಲಿ ನಿರತರಾಗಿರುವುದು ಕಾಂಗ್ರೆಸ್ ಸರ್ಕಾರದ ಸಂವೇದನಾರಹಿತ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿಗಳು ಮೊದಲು ಗ್ರಾಮೀಣ ಜನರ ಕುಡಿಯುವ ನೀರಿನ ಸಮಸ್ಯೆಗೆ ಆದ್ಯತೆ ನೀಡಬೇಕು. ವಿಫಲವಾಗಿರುವ ಕೊಳವೆಬಾವಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಅಗತ್ಯವಿರುವ ಕಡೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಬೇಕು. ಜನರ ಬಾಯಾರಿಕೆ ನೀಗಿಸಲು ಸಮರೋಪಾದಿಯಲ್ಲಿ ಕ್ರಮ ಕೈಗೊಂಡ ನಂತರ ವಿದೇಶ ಪ್ರವಾಸದ ಬಗ್ಗೆ ಯೋಚಿಸಲಿ ಎಂದು ಆರ್. ಅಶೋಕ್ ಆಗ್ರಹಿಸಿದ್ದಾರೆ





