ತಮಿಳುನಾಡಿಗೆ 15 ದಿನ ನಿತ್ಯ 2,000 ಕ್ಯೂಸೆಕ್ ನೀರು ಹರಿಸಲು CWMA ಸೂಚನೆ; ರಾಜ್ಯದ ವಾಸ್ತವ ಪರಿಸ್ಥಿತಿ ಮಂಡಿಸುವಲ್ಲಿ ಸರ್ಕಾರ ಎಡವಿದೆ ಎಂದು ಟೀಕೆ
ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ಎದುರಾಗಿರುವ ನಡುವೆಯೇ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 2,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೂಚಿಸಿರುವುದಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾವೇರಿ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಸಂಪೂರ್ಣ ವಿಫಲವಾಗಿದೆ. ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಪ್ರಾಧಿಕಾರದ ಮುಂದೆ ಸಮರ್ಥವಾಗಿ ಮಂಡಿಸುವಲ್ಲಿ ಸರ್ಕಾರ ಎಡವಿದೆ ಎಂದು ಅವರು ಟೀಕಿಸಿದ್ದಾರೆ.
ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದು, ಕುಡಿಯುವ ನೀರಿಗೂ ಹಾಹಾಕಾರ ಎದುರಾಗುವ ಆತಂಕವಿದೆ. ರೈತರ ಬೆಳೆಗಳು ಒಣಗುತ್ತಿವೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಪ್ರಾಧಿಕಾರದ ಸಭೆಗೆ ರಾಜ್ಯದ ಪ್ರತಿನಿಧಿಗಳು ಖುದ್ದಾಗಿ ಹಾಜರಾಗಿ ರಾಜ್ಯದ ಸಂಕಷ್ಟವನ್ನು ಪರಿಣಾಮಕಾರಿಯಾಗಿ ಮಂಡಿಸಬೇಕಿತ್ತು. ಆದರೆ, ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಟಾಚಾರಕ್ಕೆ ಭಾಗವಹಿಸಿ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ.
ನಮ್ಮ ಜಲಾಶಯಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ಕುಡಿಯುವ ನೀರಿನ ಅಗತ್ಯ, ರೈತರ ಸಂಕಷ್ಟ ಹಾಗೂ ಬರಗಾಲದ ತೀವ್ರತೆಯನ್ನು ಪ್ರಾಧಿಕಾರದ ಮುಂದೆ ಗಟ್ಟಿಯಾಗಿ ಪ್ರತಿಪಾದಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕರ್ನಾಟಕದ ಹಿತಾಸಕ್ತಿಯನ್ನು ರಕ್ಷಿಸಲು ಅಗತ್ಯವಾದ ಕಾನೂನು ಮತ್ತು ತಾಂತ್ರಿಕ ವಾದಗಳನ್ನು ಸಮರ್ಥವಾಗಿ ಮಂಡಿಸಬೇಕಾದ ಸರ್ಕಾರ ಕೈಕಟ್ಟಿ ಕುಳಿತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ತಮಿಳುನಾಡಿನ ಟಿವಿಕೆ ಸರ್ಕಾರದ ರಾಜಕೀಯ ಒತ್ತಡಕ್ಕೆ ಮಣಿದು, ಮೈತ್ರಿಕೂಟದ ಹಿತಾಸಕ್ತಿಗಾಗಿ ಕರ್ನಾಟಕದ ರೈತರ ಬದುಕನ್ನು ಬಲಿಕೊಡಲಾಗುತ್ತಿದೆಯೇ? ಕಾವೇರಿ ವಿಚಾರದಲ್ಲಿ ಪದೇಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ರಾಜ್ಯದ ಹಿತಾಸಕ್ತಿ ಕಾಪಾಡಲು ಏಕೆ ವಿಫಲರಾಗುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಕನ್ನಡಿಗರ ಹಿತಾಸಕ್ತಿ ಮತ್ತು ರೈತರ ಬದುಕನ್ನು ರಕ್ಷಿಸುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರು ಕೂಡಲೇ ನಾಡಿನ ಜನತೆಯ ಕ್ಷಮೆಯಾಚಿಸಿ ರಾಜೀನಾಮೆ ನೀಡಬೇಕು ಎಂದು ಆರ್. ಅಶೋಕ್ ಆಗ್ರಹಿಸಿದ್ದಾರೆ.
ಕನ್ನಡಿಗರ ಕುಡಿಯುವ ನೀರಿನ ಹಕ್ಕು ಮತ್ತು ರೈತರ ಬದುಕಿನ ಪ್ರಶ್ನೆಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ನಾಡಿನ ಹಿತಾಸಕ್ತಿಯನ್ನು ಕಾಪಾಡಲು ಯೋಗ್ಯತೆಯಿಲ್ಲದ ಕಾಂಗ್ರೆಸ್ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸುವ ದಿನ ದೂರವಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.





