ಜೈಪುರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಕಾಂಗ್ರೆಸ್ ಅಧ್ಯಕ್ಷರಾಗಬೇಕೆಂಬ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇನ್ನೊಮ್ಮೆ ಪಕ್ಷವನ್ನು ಮುನ್ನಡೆಸಬೇಕು ಎಂದು ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಒತ್ತಾಯಿಸಿದ್ದಾರೆ.
ಜೈಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿನ್ ಪೈಲಟ್, ಚೀನಾದೊಂದಿಗಿನ ಗಡಿ ವಿವಾದವನ್ನು ಸರಿಯಾಗಿ ನಿಭಾಯಿಸಿದ್ದಕ್ಕಾಗಿ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ರಾಹುಲ್ ಗಾಂಧಿ, ನರೇಂದ್ರ ಮೋದಿ ಸರ್ಕಾರದ ಮೇಲೆ ತೀಕ್ಷ್ಣ ವಾಗ್ದಾಳಿ ನಡೆಸುತ್ತಿರುವುದು ನೋಡಿದರೆ ಅವರು ಮತ್ತೊಮ್ಮೆ ಪಕ್ಷದ ಅಧ್ಯಕ್ಷ ಸ್ಥಾನ ಅಲಂಕರಿಸಬೇಕು ಎಂಬುದು ನಮ್ಮೆಲ್ಲರ ಇಚ್ಛೆಯಾಗಿದೆ. ಹೀಗಾಗಿ ಅವರು ಮತ್ತೆ ಎಐಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ಇಂಧನ-ಬೆಲೆ ಏರಿಕೆ ಮತ್ತು ಚೀನಾ-ಭಾರತ ಗಡಿಯಲ್ಲಿನ ಉದ್ವಿಗ್ನತೆಯ ಬಗ್ಗೆಯೂ ಪೈಲಟ್ ಮಾತನಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಗಡಿ ಪರಿಸ್ಥಿತಿ ಬಗ್ಗೆ ಇನ್ನೂ ಗೊಂದಲವಿದೆ. ಇದೇ ವೇಳೆ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ನಿರಂತರವಾಗಿ ಏರುತ್ತಿವೆ ಮತ್ತು ಜನರ ಮೇಲೆ ಒತ್ತಡ ಹೇರುತ್ತಿವೆ. ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ನಾವು ಕೇಂದ್ರವನ್ನು ಒತ್ತಾಯಿಸುತ್ತೇವೆ ಎಂದು ಪೈಲಟ್ ಹೇಳಿದರು.
ಇನ್ನು ಮೊನ್ನೆಯಷ್ಟೆ ಅಶೋಕ್ ಗೆಹ್ಲೋಟ್ ಅವರು ರಾಹುಲ್ ಗಾಂಧಿ ಮತ್ತೊಮ್ಮೆ ಕಾಂಗ್ರೆಸ್ ಅಧ್ಯಕ್ಷರಾಗಬೇಕೆಂದು ಒತ್ತಾಯಿಸಿದ್ದರು.