ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಕೆಲವೆಡೆ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಈಗ ಮತ್ತಷ್ಟು ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅಕ್ಟೋಬರ್ 21ರ ವರೆಗೆ ಬೆಂಗಳೂರು ನಗರದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ, ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಅ. 21ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಅ.19ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಜನರು ಕಂಗಾಲಾಗಿದ್ದಾರೆ.