ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾನುವಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡು ಕರಾವಳಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ.
ಬೆಂಗಳೂರು, ಮಂಗಳೂರು, ಮಂಡ್ಯ, ಮೈಸೂರು, ರಾಮನಗರ, ಹಾಸನ, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಮುಂಜಾನೆ ಇದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪ ಏರಿಕೆಯಾಗಲಿದೆ.
ಇನ್ನೂ ಶಿವಮೊಗ್ಗ, ಬೆಳಗಾವಿ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ 4 ದಿನಗಳಿಂದ ಮಳೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ.
ಹಾಗೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಹಾಸನ, ದಾವಣಗೆರೆ, ಮೈಸೂರಿನಲ್ಲಿಯೂ ಏಪ್ರಿಲ್ 11ರ ತನಕ ಮಳೆಯಾಗಲಿದೆ.