ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಏಪ್ರಿಲ್ 3 ರಿಂದ 5ರ ವರೆಗೆ ಉಷ್ಣ ಹವೆ ಇರಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿದಿನ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 41.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ 17.08 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿರುವುದು ಆತಂಕಕ್ಕೆ ಕಾರಣವಾಗಿದೆ. ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಜನರು ಮನೆಯಿಂದ ಆಚೆ ಬಾರದಿರುವುದರಿಂದಾಗಿ ರಸ್ತೆಗಳು ಬಿಕೋ ಎನ್ನುತ್ತಿವೆ.