ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವರುಣನ ಅಬ್ಬರ ಜೋರಾಗಿದೆ. ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಮನೆ ಮೇಲೆ ಗುಡ್ಡ ಕುಸಿದ ಘಟನೆ ಬಂಟ್ವಾಳ ತಾಲೂಕಿನ ಮಂಗಳಪದವು ಎಂಬಲ್ಲಿ ನಡೆದಿದೆ.
ಗುಡ್ಡ ಕುಸಿದ ಪರಿಣಾಮ ಅಬ್ದುಲ್ಲಾ ಎಂಬವರಿಗೆ ಸೇರಿದ ಮನೆ ಸಂಪೂರ್ಣವಾಗಿ ನೆಲಸಮವಾಗಿದ್ದು, ಮನೆಯಲ್ಲಿದ್ದ ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಡ್ಡ ಕುಸಿದ ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರ ಸಮಯ ಪ್ರಜ್ಞೆಯಿಂದ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳಿಗೆ ವಿಟ್ಲ, ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಗಳೂರು ಹೊರವಲಯದ ಮುಲ್ಕಿ ಹೋಬಳಿಯ ಆಸುಪಾಸಿನಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಅಪಾಯ ಮಟ್ಟ ಮೀರಿ ಶಾಂಭವಿ ನದಿ ಹರಿಯುತ್ತಿದೆ.
ಬಪ್ಪನಾಡು ದುರ್ಗಾಪರಮೇಶ್ವರಿ, ಶಿಮಂತೂರು ಆದಿಜನಾರ್ದನ ದೇಗುಲಗಳಿಗೆ ನೀರು ನುಗ್ಗಿದೆ. ಹಲವೆಡೆ ಕೃಷಿಭೂಮಿ ಸಂಪೂರ್ಣ ಜಲಾವೃತಗೊಂಡಿದ್ದು, ಕೃತಕ ನೆರೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ನಾಡದೋಣಿ ಬಳಸಿ ಸ್ಥಳೀಯರಿಂದ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಕಳೆದ ಎರಡು ದಿನಗಳ ಮಳೆಗೆ ಜನ ಹೈರಾಣಾಗಿದ್ದಾರೆ. ಇನ್ನೂ ಎರಡು ದಿನ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ರೆಡ್ ಅಲರ್ಟ್ ಘೋಷಣೆ ಮಾಡಿದೆ.









