ಇನ್ನೂ 4 ದಿನ ರಾಜ್ಯದ ಹಲವಡೆ ಮುಂದುವರೆಯಲಿರುವ ಮಳೆ
ಬೆಂಗಳೂರು: ರಾಜ್ಯದ ಹಲವಡೆ ಕಳೆದ 3-4 ದಿನಗಳಿಂದ ಮಳೆಯಾಗುತ್ತಿದ್ದು, ಮಳೆ ಇನ್ನೂ 4 ದಿನಗಳ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಲೆನಾಡು ಕರ್ನಾಟಕ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಇಂದಿನಿಂದ ಏಪ್ರಿಲ್ 24ರವರೆಗೆ ಮಳೆಯಾಗಲಿದೆ. ಹಾಗೇ ಕರಾವಳಿ ಕರ್ನಾಟಕ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಏಪ್ರಿಲ್ 22 ರಿಂದ 24ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ.
ಅಲ್ಲದೇ ಉತ್ತರ ಕರ್ನಾಟಕ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡದಲ್ಲಿ ಭಾರಿ ಮಳೆಯಾಗಲಿದ್ದು, ಮುಂದಿನ 72 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.