ಬೆಂಗಳೂರು : ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ಹತೋಟಿಯಲ್ಲಿದ್ದು, ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಆರ್ಥಿಕ ಚಟುವಟಿಕೆಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಯಾವುದೇ ಅಡ್ಡಿಯಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿಂದು ನಿರ್ಮಾಣ ವಲಯದ ಪ್ರಮುಖರ ಜೊತೆ ಸಭೆ ನಡೆಸಿದ ಅವರು, ಕೆಂಪು ವಲಯ ಹೊರತುಪಡಿಸಿ ಇತರೆಡೆ ವ್ಯಾಪಾರ, ವಹಿವಾಟು, ಕಟ್ಟಡ ನಿರ್ಮಾಣ ಕಾಮಗಾರಿ ಮತ್ತು ಕೈಗಾರಿಕೆಗಳನ್ನು ಅಗತ್ಯ ಪ್ರಮಾಣದಲ್ಲಿ ಆರಂಭಿಸಬಹುದಾಗಿದೆ. ಇದಕ್ಕಾಗಿ ಸೂಕ್ತ ವೇದಿಕೆ ಸಿದ್ಧಪಡಿಸಿಕೊಳ್ಳಿ ಎಂದು ತಿಳಿಸಿದರು.
ಇದೇ ವೇಳೆ ಕಾರ್ಮಿಕರು ವಲಸೆ ಹೋಗುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಿಎಂ, ಬಿಲ್ಡರ್ ಗಳು ಸೂಕ್ತ ಉದ್ಯೋಗಾವಕಾಶ ನೀಡಿ ಕಾರ್ಮಿಕರನ್ನು ತಮ್ಮಲ್ಲೇ ಉಳಿಸಿಕೊಳ್ಳಬೇಕು. ಮತ್ತೆ ತಮ್ಮ ಊರುಗಳಿಗೆ ತೆರಳುವುದನ್ನು ತಡೆಯಬೇಕು. ಕಾರ್ಮಿಕರಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟು ಸಕಾಲಕ್ಕೆ ವೇತನ ಪಾವತಿ ಮಾಡಬೇಕು. ಕಾರ್ಮಿಕರು ಸಹ ಊಹಾಪೋಹಗಳಿಗೆ ಕಿವಿಗೊಟ್ಟು ಅನಗತ್ಯವಾಗಿ ಪ್ರಯಾಣ ಮಾಡಬಾರದು ಎಂದು ಮನವಿ ಮಾಡಿಕೊಂಡರು.
ಇನ್ನು ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.