ಚಾಮುಂಡಿ ಬೆಟ್ಟದಲ್ಲಿ ಭೂಕುಸಿತವಾದ ಸ್ಥಳಕ್ಕೆ ಸಚಿವರ ಭೇಟಿ, ಪರಿಶೀಲನೆ S T Somashekhar saaksha tv
ಮೈಸೂರು : ಇತ್ತೀಚಿಗೆ ಭಾರೀ ಮಳೆಯಿಂದಾಗಿ ಭೂ ಕುಸಿತ ಸಂಭವಿಸಿದ್ದ ಮೈಸೂರಿನ ಚಾಮುಂಡಿ ಬೆಟ್ಟದ ನಂದಿ ಮಾರ್ಗ ಸ್ಥಳಕ್ಕೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ನಿನ್ನೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಎಸ್. ಟಿ. ಸೋಮಶೇಖರ್ ಮಾತನಾಡಿ, ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂಬಂಧ ಲೋಕೋಪಯೋಗಿ ಸಚಿವರ ಜೊತೆ ಮಾತುಕತೆ ನಡೆಸಲಾಗಿದ್ದು, ದೀಪಾವಳಿ ನಂತರ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ ಎಂದರು.
ಬಳಿಕ ಶಾಸಕ ಜಿ. ಟಿ. ದೇವೇಗೌಡ ಮಾತನಾಡಿ, ಚಾಮುಂಡಿ ಬೆಟ್ಟಕ್ಕೆ ಪ್ರವಾಸಿಗರು ಹೆಚ್ಚಾಗಿ ಆಗಮಿಸುವುದರಿಂದ ಶಾಶ್ವತ ತಡೆಗೋಡೆ ಹಾಗೂ ಮಳೆ ನೀರು ಸರಾಗವಾಗಿ ಹರಿಯುವಂತಹ ಕಾರ್ಯಗಳನ್ನು ಮಾಡಬೇಕಾಗಿದೆ.
ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.