ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿರುವ ಅಮೆರಿಕ ಸೇರಿದಂತೆ ವಿವಿಧ ದೇಶಗಳು, ಹೈಡ್ರಾಕ್ಸಿಕ್ಲೋರೋಕ್ವಿನ್ ಮತ್ತು ಪ್ಯಾರೆಸಿಟಮಾಲ್ ರಫ್ತು ಮಾಡಲು ಭಾರತಕ್ಕೆ ಮನವಿ ಸಲ್ಲಿಸಿದ್ದು, ಔಷಧಿ ರಫ್ತಿಗೆ ಭಾರತ ಸರ್ಕಾರ ಮುಂದಾಗಿದೆ.
ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧಿ ರಫ್ತಿಗೆ ಮುಂದಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರದ ನಿರ್ಧಾರವನ್ನು ರಾಮಾಯಣದಲ್ಲಿ ಬರುವ ಸಂಜೀವಿನಿ ಪರ್ವತಕ್ಕೆ ಹೋಲಿಕೆ ಮಾಡಿದ್ದಾರೆ.
ರಾಮಾಯಣದ ಪೌರಾಣಿಕ ಕಥೆಯಲ್ಲಿ ಲಂಕೆಯಲ್ಲಿ ನಡೆದ ಯುದ್ಧದಲ್ಲಿ ಗಾಯಗೊಂಡಿದ್ದ ಶ್ರೀರಾಮನ ಸಹೋದರ ಲಕ್ಷಣ ಮೂರ್ಛೆ ತಪ್ಪಲು, ವಾನರ ಸೈನದ ವೈದ್ಯರು ಚಿಕಿತ್ಸೆ ನೀಡಲು ಸಂಜೀವಿನಿ ಗಿಡಮೂಲಿಕೆ ಬೇಕೆಂದು ಹೇಳುತ್ತಾರೆ. ಆಗ ರಾಮನ ಪರಮಭಕ್ತ ಹನುಮಂತ ಸಂಜೀವಿನಿ ಪರ್ವತವನ್ನೇ ಹೊತ್ತುಕೊಂಡು ಬರುತ್ತಾನೆ. ಈ ಪ್ರಸಂಗವನ್ನು ನೆನೆದು, ಔಷಧಿ ರಫ್ತಿಗೆ ಭಾರತ ನೀಡಿರುವ ಅನುಮತಿಯ ಹಿನ್ನೆಲೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು ಪತ್ರವನ್ನು ಬರೆದಿದ್ದು, ಭಗವಾನ್ ರಾಮನ ಸಹೋದರ ಲಕ್ಷ್ಮಣನ ಜೀವವನ್ನು ಉಳಿಸಲು ಹನುಮಂತ ಹಿಮಾಲಯದಿಂದ ಸಂಜೀವಿನಿ ತಂದ. ಯೇಸು ಅನಾರೋಗ್ಯದಿಂದ ಬಳಲುತ್ತಿದ್ದವರನ್ನು ಗುಣಪಡಿಸಿದ ಹಾಗೂ ಬಾರ್ಟಿಮಿಯುಗೆ ಕಣ್ಣು ಕಾಣುವಂತೆ ಮಾಡಿದ. ಜಗತ್ತಿನ ಎಲ್ಲಾ ಜನರ ಸಲುವಾಗಿ ಭಾರತ ಮತ್ತು ಬ್ರೆಜಿಲ್ ಈ ಜಾಗತಿಕ ಬಿಕ್ಕಟ್ಟನ್ನು ನಿವಾರಿಸಲು ಶ್ರಮಿಸುತ್ತಿವೆ ಎಂದು ತಿಳಿಸಿದ್ದಾರೆ.
ಭಾರತ ಔಷಧಿ ರಫ್ತಿಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ನಾನು ಲಕ್ಷಾಂತರ ರೂ. ಮೌಲ್ಯದ ಪ್ರಮಾಣದಲ್ಲಿ ಔಷಧಿ ಖರೀದಿಸಿದೆ. ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದ್ದೇನೆ. ಆದಷ್ಟು ಬೇಗ ಭಾರತದಿಂದ ರಫ್ತು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಅವರು ಗ್ರೇಟ್, ನಿಜವಾಗಿಯೂ ಒಳ್ಳೆಯವರು. ಔಷಧಿ ಭಾರತಕ್ಕೆ ಬೇಕಾಗಿರುವುದರಿಂದಲೇ ರಫ್ತಿನ ಮೇಲೆ ನಿರ್ಬಂಧ ಹೇರಿದ್ದರು. ಆದರೆ ಈಗ ಅವರಿಂದ ಸಾಕಷ್ಟು ಒಳ್ಳೆಯ ಸಂಗತಿಗಳು ಬರುತ್ತಿವೆ ಎಂದು ಪ್ರಧಾನಿ ಮೋದಿ ಅವರನ್ನು ಹೊಗಳಿದ್ದಾರೆ. ಬಹಳಷ್ಟು ಜನರು ಭಾರತದ ಸಹಾಯವನ್ನು ನೋಡುತ್ತಿದ್ದಾರೆ, ಅದರ ಬಗ್ಗೆ ಮಾತನಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಾನು ಕೆಟ್ಟ ವಿಷಯಗಳನ್ನು ಕೇಳುವುದಿಲ್ಲ. ಭಾರತಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.
ಅಮೆರಿಕದಲ್ಲಿ 4 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 15 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 26 ಜೆನರಿಕ್ ಔಷಧಿಗಳ ರಫ್ತಿಗೆ ಕಳೆದ ತಿಂಗಳಷ್ಟೇ ಭಾರತ ನಿರ್ಬಂಧ ಹೇರಿತ್ತು. ಕೊರೋನಾ ಸೋಂಕಿನಿಂದ ಕಂಗಾಲಾಗಿರುವ ಅಮೆರಿಕದಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಆ್ಯಂಟಿ ಮಲೇರಿಯಾ ಔಷಧಿಯನ್ನು ತ್ವರಿತವಾಗಿ ರಫ್ತು ಮಾಡುವಂತೆ ಅಮೆರಿಕ ಕೇಳಿತ್ತು. ಮಾನವೀಯತೆಯ ದೃಷ್ಟಿಯಿಂದ ಕೊರೋನಾ ಸೋಂಕಿನಿಂದ ಕಂಗಾಲಾಗಿರುವ ರಾಷ್ಟ್ರಗಳಿಗೆ ಆ್ಯಂಟಿ ಮಲೇರಿಯಾ (ಹೈಡ್ರೋಕ್ಸಿಕ್ಲೋರೋಕ್ವೀನ್) ಔಷಧಿ ರಫ್ತು ಮಾಡುವುದಾಗಿ ಭಾರತ ತಿಳಿಸಿದೆ.
ಕೊರೊನಾಗೆ ಇಲ್ಲಿಯವರೆಗೆ ಯಾವುದೇ ಔಷಧಿ ಕಂಡು ಹಿಡಿದಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯೇ ಯಾವುದೇ ಔಷಧಿಯಿಂದ ಕೊರೊನಾ ವಾಸಿಯಾಗಿದ್ದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಹೇಳಿದೆ.
ಆದರೆ ತಾತ್ಕಾಲಿಕವಾಗಿ ಕೊರೊನಾಗೆ ಯಾವ ಮಾತ್ರೆ ನೀಡಿದರೆ ಕಡಿಮೆಯಾಗುತ್ತದೆ ಎನ್ನುವ ಬಗ್ಗೆ ಕಂಪನಿಯೊಂದು ಅಧ್ಯಯನ ನಡೆಸಿದ್ದು, ಹಲವು ದೇಶಗಳಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯಿಂದ ರೋಗಿಗಳು ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ. ಕೊರೊನಾ ತೀವ್ರವಾಗಿ ಹರಡುತ್ತಿರುವ ಯುರೋಪ್, ದಕ್ಷಿಣ ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ವಿಶ್ವದ 30 ದೇಶಗಳ ಒಟ್ಟು 6,227 ಮಂದಿ ವೈದ್ಯರನ್ನು ಸಂಪರ್ಕಿಸಿ ಅಧ್ಯಯನ ನಡೆಸಲಾಗಿದ್ದು, ಈ ಪೈಕಿ ಶೇ.37ರಷ್ಟು ಮಂದಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರ ಪರಿಣಾಮ ಬೀರಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗೆ ಬೇಡಿಕೆ ಹೆಚ್ಚಾಗಿದೆ. ಭಾರತದಲ್ಲಿ ಮಲೇರಿಯಾ ರೋಗದ ವಿರುದ್ಧ ಹೋರಾಡಲು ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಯನ್ನು ನೀಡಲಾಗುತ್ತಿದೆ. ಭಾರತದಲ್ಲಿ ಇದು ಯಶಸ್ವಿಯಾದ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಈ ಮಾತ್ರೆಗಳನ್ನು ದೇಶದಲ್ಲಿ ಉತ್ಪಾದನೆ ಮಾಡಲಾಗುತ್ತಿದೆ.