ವಿದ್ಯಾರ್ಥಿಗಳೇ ಗಮನಿಸಿ : ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್.. ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 2020-21ನೇ ಸಾಲಿನ ಪ್ರಥಮ ಪಿಯುಸಿ ಎಲ್ಲಾ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ತೇರ್ಗಡೆ ಮಾಡಲಾಗಿದೆ. ಹಾಗೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮುಂದೂಡಲಾಗಿದೆ.
ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯು ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದು, ಈ ನಿರ್ಧಾರ ತೆಗೆದುಕೊಂಡಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯು 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 24-05-2021 ರಿಂದ 16-06-2021ರವರೆಗೆ ನಡೆಸಲು ತೀರ್ಮಾನಿಸಿ ಸುತ್ತೋಲೆಯ ಮೂಲಕ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆದ್ರ ಈಗ ರಾಜ್ಯದಲ್ಲಿ ಕೊರೊನಾ ಹೆಚ್ಚಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿದೆ. ಪರಿಷ್ಕøತ ಪರೀಕ್ಷಾ ವೇಳಾಪಟ್ಟಿಯನ್ನು ಪರೀಕ್ಷೆಯನ್ನು ನಡೆಸಲು ನಿಗದಿಪಡಿಸುವ ದಿನಾಂಕಕ್ಕೆ 15 ದಿನಗಳ ಮುಂಚಿತವಾಗಿ ಪ್ರಕಟಿಸಲಾಗುವುದು.
ಇನ್ನು 2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ಎಲ್ಲಾ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ತೇರ್ಗಡೆ ಎಂದು ಪರಿಗಣಿಸುವುದು. ಸದರಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿಯಲ್ಲಿ ಶೇ.30ರಷ್ಟು ಕಡಿತಗೊಳಿಸಿದ ಪಠ್ಯಕ್ರಮವನ್ನು ಸೇತು ಬಂಧ ತರಗತಿಗಳನ್ನಾಗಿ ನಡೆಸುವುದು. ಈ ಕುರಿತು ಹೆಚ್ಚಿನ ವಿವರಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಸುತ್ತೊಲೆಯಲ್ಲಿ ತಿಳಿಸಲಾಗಿದೆ.