ಹಿರಿಯ ಹೋರಾಟಗಾರ, ಸಾಹಿತಿ, ವಿಠ್ಠಪ್ಪ ಗೋರಂಟ್ಲಿ ನಿಧನ
ಕೊಪ್ಪಳ : ಹಿರಿಯ ಹೋರಾಟಗಾರ, ಹಿರಿಯ ಪತ್ರಕರ್ತ, ಅಂಕಣಕಾರ ಹಾಗೂ ಸಾಹಿತಿ ವಿಠ್ಠಪ್ಪ ಗೋರಂಟ್ಲಿ(78) ಅವರು ನಿನ್ನೆ ರಾತ್ರಿ ಭಾಗ್ಯನಗರದ ಅವರ ನಿವಾಸದಲ್ಲಿ ಹೃದಯಾಘತದಿಂದ ಕೊನೆಯುಸಿರೆಳೆದಿದ್ದಾರೆ.
ಕೊಪ್ಪಳ ಜಿಲ್ಲೆಯ ಹಿರಿಯ ಪತ್ರಕರ್ತರಾಗಿ ಹಲವು ವಿಷಯಗಳ ಕುರಿತು, ಹಲವು ವಿಚಾರಗಳ ಕುರಿತು ನೇರ ಹಾಗೂ ನಿಷ್ಠೂರತೆಯಿಂದ ಬರವಣಿಗೆ ಮೂಲಕ ಎಲ್ಲರ ಗಮನ ಸೆಳೆದಿದ್ದ ವಿಠ್ಠಪ್ಪ ಗೋರಂಟ್ಲಿ ಅವರು, ಜಿಲ್ಲಾ ಹೋರಾಟದ ವಿಚಾರ, ತುಂಗಭದ್ರಾ ಜಲಾಶಯದ ಹೂಳಿನ ವಿಚಾರ, ಕೈಗಾರಿಕೆಗಳ ಕಾರ್ಮಿಕರ ಶೋಷಣೆಯ ವಿಚಾರ ಸೇರಿದಂತೆ ನೊಂದವರ ಪರ ಧ್ವನಿ ಎತ್ತಿದ್ದರು.
ಸುದೀರ್ಘ ಹೋರಾಟದ ಜೀವನವೇ ಅವರದ್ದಾಗಿದ್ದು, ವಿವಿಧ ಪತ್ರಿಕೆಗಳಲ್ಲಿಯೂ ಪತ್ರಕರ್ತ, ಅಂಕಣಕಾರರಾಗಿ ಲೇಖನಗಳ ಮೂಲಕ ರಾಜ್ಯದ ಗಮನ ಸೆಳೆದಿದ್ದರು. ಇವರು 4ನೇ ತರಗತಿ ಶಿಕ್ಷಣ ಪಡೆದರೂ 20ಕ್ಕೂ ಹೆಚ್ಚು ಕೃತಿಗಳನ್ನು ಹೊರ ತಂದಿದ್ದರು.
ಹಲವು ಕವನ ಸಂಕಲನ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲೂ ಹೆಚ್ಚು ಹೆಸರು ಮಾಡಿದ್ದರು. ಇವರ ಸಮಗ್ರ ಸೇವೆ ಪರಿಗಣಿಸಿ ರಾಜ್ಯ ಸರ್ಕಾರವು ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದಲ್ಲದೇ ನೂರಾರು ಸಂಘ ಸಂಸ್ಥೆಗಳು ಇವರ ಜೀವನ ಸಾಧನೆಗೆ, ಜನ ಸೇವೆಗೆ ಸನ್ಮಾನಿಸಿ ಗೌರವಿಸಿದ್ದವು.
ವಿಠ್ಠಪ್ಪ ಗೋರಂಟ್ಲಿ ಅವರ ನಿಧನಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು, ಕೊಪ್ಪಳ ಮೀಡಿಯಾ ಕ್ಲಬ್ ಸೇರಿದಂತೆ ಸಾಹಿತ್ಯ ಬಳಗವು ಕಂಬನಿ ಮಿಡಿದಿದ್ದಾರೆ. ಇಂದು ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.









