ಬೆಳಗಾವಿ: ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ ಎಂದು ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿರುವ ಘಟನೆ ನಡೆದಿದೆ.
ಈ ಘಟನೆ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ನಡೆದಿದೆ. ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಕಾರ್ಯಕ್ರಮ ನಡೆದಿತ್ತು. ಈ ಸಂದರ್ಭದಲ್ಲಿ ವೇದಿಕೆ ಮೇಲೆ ಅಂಬೇಡ್ಕರ್ ಬಾವಚಿತ್ರ ಇಡಲಾಗಿತ್ತು. ಆನಂತರ ಮೆರವಣಿಗೆ ನಡೆದಿತ್ತು. ಈ ಸಂದರ್ಭದಲ್ಲಿ ಕಿಡಿಗೇಡಿಗಳು ಭಾವಚಿತ್ರವನ್ನು ಕೆಳಗೆ ಬೀಳಿಸಿ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇದನ್ನು ಗಮನಿಸಿದ ಕಾರ್ಯಕ್ರಮ ಆಯೋಜಕರು ಹಾಗೂ ಮೆರವಣಿಗೆಯಲ್ಲಿ ಭಾಗಿಯಾದ ಜನ ಕಿಡಿಗೇಡಿಗಳ ಗುಂಪನ್ನು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಗಲಾಟೆ ನಡೆದಿದೆ. ಕಿಡಿಗೇಡಿಗಳ ಗುಂಪು ಮಹಿಳೆಯರು ಹಾಗೂ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿದನ್ನು ಖಂಡಿಸಿ ಸದಲಗಾ ಪೊಲೀಸ್ ಠಾಣೆಗೆ ಇನ್ನೊಂದು ಗುಂಪು ಮುತ್ತಿಗೆ ಹಾಕಿ ಪ್ರತಿಭಟಿಸಿದೆ. ಈ ವೇಳೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.