ಬೆಂಗಳೂರು: ಶಿವಮೊಗ್ಗದಲ್ಲಿ ನಿರ್ಮಿಸಲಾಗುತ್ತಿರುವ ಮಿನಿ ಏರ್‍ಪೋರ್ಟ್‍ನ್ನು 220 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ವಿಮಾನ ನಿಲ್ದಾಣ ಕಾಮಗಾರಿಗೆ ಆನ್‍ಲೈನ್ ಮೂಲಕ ಚಾಲನೆ ನೀಡಿದ ನಂತರ ಮಾತನಾಡಿದ ಬಿಎಸ್‍ವೈ, 2013ರ ನಂತರ ಅಧಿಕಾರಿಕ್ಕೆ ಬಂದ ಸರ್ಕಾರಗಳು ವಿಮಾನ ನಿಲ್ದಾಣ ಕಾಮಗಾರಿಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದವು. ಜಿಲ್ಲೆಯ ಜನರ ಆಶೋತ್ತರಗಳನ್ನು ಅರಿತು ಏರ್‍ಪೋರ್ಟ್ ಕಾಮಗಾರಿಗೆ ಚಾಲನೆ ನೀಡಿರುವುದಾಗಿ ಹೇಳಿದರು.
ಶಿವಮೊಗ್ಗ ತಾಲೂಕಿನ ಸೋಗಾನೆ ಬಳಿ 662.3 ಎಕರೆ ವಿಸ್ತೀರ್ಣದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತಿದೆ. ಯೋಜನೆಯ ಕಾಮಗಾರಿಯನ್ನು 2 ಹಂತದಲ್ಲಿ ಕೈಗೊಳ್ಳಲಾಗುತ್ತಿದೆ. ಒಂದು ಹಂತದ ಕಾಮಗಾರಿಯನ್ನು ಒಂದು ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಕಾಮಗಾರಿಯ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉಡಾನ್ ಯೋಜನೆಯಡಿ ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ವಿಮಾನಯಾನಕ್ಕೆ ಸಹಾಯವಾಗಲಿದೆ. ಜೊತೆಗೆ ಶಿವಮೊಗ್ಗ ಜಿಲ್ಲೆಯ ಇತರ ತಾಲೂಕುಗಳಲ್ಲಿ ಪ್ರವಾಸೋದ್ಯಮ, ಕೈಗಾರಿಕೆ ಹಾಗೂ ಆರ್ಥಿಕ ಚಟುವಟಿಕೆ ಇನ್ನಷ್ಟು ಗರಿಗೆದರಲು ಸಹಾಯವಗಲಿದೆ ಎಂದು ಯಡಿಯೂರಪ್ಪ ವಿವರ ನೀಡಿದರು.
ರಾಜ್ಯದ ಸರ್ವತೋಮುಖ ಅಭಿವೃದ್ಧಿ ನಮ್ಮ ಸರ್ಕಾರದ ಉದ್ದೇಶವಾಗಿದೆ. ಆರೋಗ್ಯ, ಶಿಕ್ಷಣ, ಮೂಲಭೂತ ಸೌಲಭ್ಯ ಕಲ್ಪಿಸಲು ಸರ್ಕಾರ ಯೋಜನೆ ರೂಪಿಸಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಗೆ ವೇಗ ನೀಡಲಾಗಿದೆ, ರಸ್ತೆ ಸಂಪರ್ಕ ಸುಧಾರಣೆಗೆ ಒತ್ತು ನೀಡಲಾಗಿದೆ. ಜಿಲ್ಲೆಯ ಚತುಷ್ಪತ ಹೆದ್ದಾರಿ ಕಾಮಗಾರಿಗೆ ಪ್ರಗತಿಯಲ್ಲಿದೆ. ಶಿವಮೊಗ್ಗ ಶಿಕಾರಿಪುರ ರೈಲ್ವೆ ಮಾರ್ಗದ ಕಾಮಗಾರಿಗಳು ಪ್ರಗತಿಯಲ್ಲಿವೆ. ಸಾಗರ ತಾಲೂಕಿನ ಸಿಂಗದೂರು ಬಳಿ ನಿರ್ಮಿಸಲಾಗುತ್ತಿರುವ ಸಿಂಗದೂರು ಸೇತುವೆಯ ಕಾಮಗಾರಿಗೆ ವೇಗ ನೀಡಲಾಗಿದೆ ಎಂದು ಹೇಳಿದರು.