ಬೆಂಗಳೂರು : ಸ್ವಗ್ರಾಮಗಳಿಗೆ ತೆರಳಲು ಕಾರ್ಮಿಕರಿಗೆ ವಿಶೇಷ ರೈಲಿನ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯ ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.
ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ನಿಯೋಗ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹೊರ ರಾಜ್ಯದಲ್ಲಿರುವ ಕನ್ನಡಿಗರು ಹಾಗೂ ಕಾರ್ಮಿಕರನ್ನು ರೈಲಿನಲ್ಲಿ ಕರೆತರುವಂತೆ ಮತ್ತು ಅಂತರ್ ಜಿಲ್ಲೆಗಳಲ್ಲಿ ಸಿಲುಕಿರುವ ಕಾರ್ಮಿಕರನ್ನು ಅವರ ಸ್ವಂತ ಊರಿಗೆ ಹೋಗಲು ವ್ಯವಸ್ಥೆ ಮಾಡುವಂತೆ ಕೋರಿದ್ದೇವೆ ಎಂದು ತಿಳಿಸಿದರು.
ಇನ್ನು, ಕಾರ್ಮಿಕರು ಊರುಗಳಿಗೆ ತೆರಳಲು ಉಚಿತ ಬಸ್ ವ್ಯವಸ್ಥೆ ಮಾಡಿದ ಸಿಎಂ ನಿರ್ಧಾರವನ್ನು ಸ್ವಾಗತಿಸುತ್ತೇವೆ. ನಮ್ಮ ಪಕ್ಷದ ಮನವಿಯನ್ನು ಒಪ್ಪಿ ಉಚಿತ ಬಸ್ ವ್ಯವಸ್ಥೆ ಮಾಡಿದ ಸಿಎಂ ಬಗ್ಗೆ ನಮಗೆ ಅಪಾರ ಗೌರವವಿದೆ ಎಂದರು.
ಇದೇ ವೇಳೆ, ಸಚಿವ ಸುರೇಶ್ ಕುಮಾರ್ ಫೇಸ್ ಬುಕ್ ಕಾಮೆಂಟ್ ಗೆ ಟಾಂಗ್ ನೀಡಿದ ಡಿಕೆಶಿ, ವಿರೋಧ ಪಕ್ಷವಾಗಿ ನಮ್ಮ ಕೆಲಸ ಮಾಡುತ್ತಿದ್ದೇವೆ. ಪ್ರತಿಭಟನೆ ಮಾಡುವಷ್ಟು ನಮಗೆ ಸ್ವಾತಂತ್ರ‍್ಯ ಇಲ್ಲವೇ, ವಿರೋಧ ಪಕ್ಷದವರ ಬಾಯಿ ಮುಚ್ಚಿಸುವ ಕೆಲಸ ಮಾಡಲು ನಾವು ಬಿಡಲ್ಲ ಎಂದು ಹೇಳಿದರು.