ಬೆಂಗಳೂರು : ರಾಜ್ಯ ಚುನಾವಣಾ ಆಯೋಗ ಬಿಜೆಪಿ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿರುವುದನ್ನು ಖಂಡಿಸಿ ಸರಣಿ ಟ್ವೀಟ್ ಮಾಡಿರುವ ಅವರು, ಗ್ರಾಮಪಂಚಾಯತ್ಗಳ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಮುಂದೂಡಿರುವುದು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ 1993ಕ್ಕೆ ಬಗೆದ ಅಪಚಾರ.
ಈ ಪ್ರಜಾಪ್ರಭುತ್ವ ವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಪಕ್ಷವೂ ನ್ಯಾಯಾಲಯದಲ್ಲಿ ಪ್ರಶ್ನಿಸಲಿದೆ. ಚುನಾವಣೆ ಮುಂದೂಡಿಕೆ ನಮಗೆ ಅನಿರೀಕ್ಷಿತವೇ ಅಲ್ಲ. ಇಂತಹದ್ದೊಂದು ಅನುಮಾನದಿಂದಲೇ ನಾವು ಚುನಾವಣಾ ಆಯುಕ್ತರನ್ನು ಭೇಟಿಯಾಗಿ ಮನವಿ ಮಾಡಿದ್ದೆವು. ನಮ್ಮ ಅನುಮಾನ ಈಗ ನಿಜವಾಗಿದೆ. ಇದರ ವಿರುದ್ಧ ಗ್ರಾಮಪಂಚಾಯತ್ ಮಟ್ಟದಲ್ಲಿಯೇ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ.
ರಾಜ್ಯ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ. ಚುನಾವಣೆ ಎದುರಿಸಲಾಗದ ಪುಕ್ಕಲು ಸರ್ಕಾರ ನಾಮನಿರ್ದೇಶನದ ಸದಸ್ಯರ ಮೂಲಕ ಅಡ್ಡಮಾರ್ಗದಲ್ಲಿ ಗ್ರಾಮಪಂಚಾಯತ್ ಮೇಲೆ ಸ್ವಾಮ್ಯ ಸ್ಥಾಪಿಸಲು ಹೊರಟಿರುವುದು ನಾಚಿಕೆಗೇಡಿನ ನಡವಳಿಕೆ. ಅಲ್ಲದೆ ಗ್ರಾಮಪಂಚಾಯತ್ ಚುನಾವಣೆಯನ್ನು ಮುಂದೂಡುವ ಮೂಲಕ ರಾಜ್ಯ ಚುನಾವಣಾ ಆಯೋಗ ಆಡಾಳಿತರೂಢ ಪಕ್ಷ ಹಾಕಿದ ತಾಳಕ್ಕೆ ತಕ್ಕ ಹಾಗೆ ಕುಣಿದಿದೆ. ಇದೊಂದು ಕೆಟ್ಟ ಸಂಪ್ರದಾಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.