Siddaramaiah | ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ರಜೆ ಘೋಷಿಸಿ
ಬೆಂಗಳೂರು : ಹಿಜಾಬ್-ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ ಕಾಲೇಜುಗಳಿಗೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ರಜೆ ಘೋಷಿಸಿ ಆನ್ ಲೈನ್ ತರಗತಿಗಳನ್ನು ಶುರು ಮಾಡಬೇಕೆಂದು ಬಸವರಾಜ ಬೊಮ್ಮಾಯಿ ಅವರನ್ನು ವಿಪಕ್ಷ ನಾಯಕ ( Siddaramaiah ) ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳು ಕದನ ಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ.
ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿರುವ ಕಡೆಗಳಲ್ಲಿ ಪುಂಡು ವಿದ್ಯಾರ್ಥಿಗಳ ಮೇಲೆ ಕಠಿಣ ಕ್ರಮಕೈಗೊಳ್ಳದೆ ಪೊಲೀಸರು ಮೂಕ ಪ್ರೇಕ್ಷಕರಾಗಿರುವುದು ವಿದ್ಯಾರ್ಥಿಗಳ ಹೆತ್ತವರಲ್ಲಿ ಆತಂಕ ಹುಟ್ಟಿಸಿದೆ.
ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ ಸಮಸ್ಯೆಯನ್ನು ರಾಜಕೀಯ ಕಾರಣಕ್ಕಾಗಿ ಉಲ್ಭಣಗೊಳಿಸಿರುವ ಬಿಜೆಪಿ ಸರ್ಕಾರ ಈಗ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ.
ಹಿಜಾಬ್ ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿರುವುದು ವಿಷಾದನೀಯ.
ಪರಿಸ್ಥಿತಿಯ ಗಂಭೀರತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಲಾದರೂ ಅರಿತುಕೊಂಡು ತಕ್ಷಣ ಮಧ್ಯಪ್ರವೇಶಿಸಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಆನ್ ಲೈನ್ ತರಗತಿಗಳನ್ನು ತಕ್ಷಣ ಶುರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.