ಚಿಕ್ಕಮಗಳೂರು : ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯ ಬಂದ್‍ಗೆ (Karnataka Bandh) ಹಲವೆಡೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಕಳಸ ಪಟ್ಟಣದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕನ್ನಡಪರ ಹೋರಾಟಗಾರನೊಬ್ಬ ಕೈ ಕೊಯ್ದುಕೊಂಡು ರಕ್ತ ಕೊಡುತ್ತೇವೆಯೇ ಹೊರತು ನೀರು ಕೊಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾನೆ.
ಕನ್ನಡಪರ ಸಂಘಟನೆ ಕಾರ್ಯಕರ್ತ ರಾಜು ಎಂಬಾತ ಪ್ರತಿಭಟನೆ ವೇಳೆ ಏಕಾಏಕಿ ಕೈ ಕೊಯ್ದುಕೊಂಡು ರಕ್ತ ನೆಲಕ್ಕೆ ಬೀಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಜಿಲ್ಲೆಯ 103ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿವೆ. ಬೆಳಗ್ಗೆಯಿಂದಲೇ ಜಿಲ್ಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡುವ ಮೂಲಕ ಸಾರ್ವಜನಿಕರೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಬಳಿಕ ಜೊತೆಗಿದ್ದ ರೈತ ಸಂಘ ಹಾಗೂ ಇತರೆ ಹೋರಾಟಗಾರರು ರಾಜು ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು (BJP Workers) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.








