“100 ಕ್ಕೆ 200 ರಷ್ಟು ಸಿದ್ದರಾಮಯ್ಯನವರೇ ಮುಂದಿನ ಸಿಎಂ”
ಕೊಪ್ಪಳ : ಶಾಸಕ ಜಮೀರ್ ಅಹ್ಮದ್ ಬೆನ್ನಲ್ಲೆ ಮತ್ತೊಬ್ಬ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್, ಸಿದ್ದರಾಮಯ್ಯ ನವರೇ ಮುಂದಿನ ಸಿಎಂ ಎಂದು ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ ಹಿಟ್ನಾಳ್, ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ.
ಈ ವಿಚಾರದಲ್ಲಿ ನನಗೆ 100 ಕ್ಕೆ 200 ರಷ್ಟು ನಂಬಿಕೆಯಿದೆ. ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗಬೇಕು. ಜನರು ಕೂಡ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು ಎಂದು ಬಯಸಿದ್ದಾರೆ.
ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಒಬ್ಬರೇ ಅಲ್ಲ, ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಕೂಡ ಇದನ್ನೇ ಹೇಳುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಅವರೆಲ್ಲರೂ ಬಯಸಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಈ ಸಮಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೆ ಪೂರಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರು.
ಸಿದ್ದರಾಮಯ್ಯ ಸಿಎಂ ಆಗಿಲ್ಲವೆಂಬ ಕೊರಗು ಜನರಲ್ಲಿದೆ. ರಾಜ್ಯದಲ್ಲಿ ಮತ್ತೆ ಒಳ್ಳೆಯ ಯೋಜನೆಗಳು ಬೇಕಾದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು. ನಮ್ಮ ಪಕ್ಷದಲ್ಲಿ ಯಾವುದೇ ನಾಯಕತ್ವ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.









