‘ಆರ್ಎಸ್ಎಸ್ ಎನ್ನುವುದು ಕೋಮುವಾದಿ ಸಂಘಟನೆ’ : ಸಿದ್ದರಾಮಯ್ಯ
ಹುಬ್ಬಳ್ಳಿ : ಆರ್ಎಸ್ಎಸ್ ಎನ್ನುವುದು ಕೋಮುವಾದಿ ಸಂಘಟನೆ. ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುವುದು, ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುವ ಕೆಲಸವನ್ನು ಆರ್ಎಸ್ಎಸ್ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಆರ್ ಎಸ್ ಎಸ್ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಆರ್ಎಸ್ಎಸ್ ಎನ್ನುವುದು ಕೋಮುವಾದಿ ಸಂಘಟನೆ.
ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುವುದು. ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿ ಕಟ್ಟುವ ಕೆಲಸವನ್ನು ಆರ್ಎಸ್ಎಸ್ ಮಾಡುತ್ತಿದೆ ಎಂದು ಆರೋಪಿಸಿದರು.
ಇದೇ ವೇಳೆ ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆಯಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಬಸವಕಲ್ಯಾಣದಲ್ಲೂ ಹೀಗೆಯೇ ಮಾಡಿದ್ದರು.
ಇದೀಗ ಹಾನಗಲ್ ಹಾಗೂ ಸಿಂಧಗಿಯಲ್ಲಿ ಸಹ ಇದೇ ರೀತಿ ಮಾಡಿದ್ದಾರೆ. ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಮ್ಮ ಅಭ್ಯಂತರವಿಲ್ಲ. ಎಲ್ಲಿ ಕಣಕ್ಕಿಳಿಸಬೇಕೋ ಅಲ್ಲಿ ನಿಲ್ಲಿಸಿಲ್ಲ ಎಂದು ದೂರಿದರು.
ಜೆಡಿಎಸ್ ನವರು ಬಿಜೆಪಿಗೆ ಸಹಾಯವಾಗಲಿ ಅಂತಾ ಅಲ್ಪಸಂಖ್ಯಾತರನ್ನು ಕಣಕ್ಕಿಳಿಸಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ ಜೆಡಿಎಸ್ ನವರು ಬಿಜೆಪಿಯನ್ನು ಯಾಕೆ ಟಾರ್ಗೆಟ್ ಮಾಡುತ್ತಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.