ಮೈಸೂರು: ಇತ್ತೀಚೆಗಷ್ಟೇ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಡಾ. ಅಶ್ವಥ್ ನಾರಾಯಣ್(Ashwath Narayan) ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು’ ಎಂಬ ಹೇಳಿಕೆ ನೀಡಿದ್ದರು. ಸದ್ಯ ಈ ಹೇಳಿಕೆ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ (Siddaramaiah) ಅವರ ಹತ್ಯೆಗೆ ಪ್ರಚೋದಿಸುವಂತೆ ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದರು. ಹೇಳಿಕೆ ಖಂಡಿಸಿ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ (Mysuru Devaraja PoliceStation) ದೂರು ಸಲ್ಲಿಸಿದ್ದಾರೆ. ದೂರು ಸಲ್ಲಿಸಿ ಬಹಳ ದಿನಗಳಾಗಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಬುಧವಾರ (ಮೇ 24) ಎಫ್ಐಆರ್ ದಾಖಲಿಸುವಂತೆ ಮತ್ತೊಮ್ಮೆ ದೂರು ಸಲ್ಲಿಸಿದ್ದಾರೆ.
ದೂರು ಸ್ವೀಕರಿಸಿದ ಪೊಲೀಸರು ಮಾಜಿ ಸಚಿವರ ವಿರುದ್ಧ ಕೊಲೆ ಬೆದರಿಕೆ, ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಅಶ್ವಥ್ ನಾರಾಯಣ್ ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಸಾಧಿಸುತ್ತಾರೆ. ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ? ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು ಎಂದು ಹೇಳಿದ್ದಾರೆ.