Siddaramaiah | ಬೋರ್ಡ್ ನಾಟಕ ನಿಲ್ಲಿಸಿ, ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿ
ಬೆಂಗಳೂರು : ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಈ ಬೋರ್ಡ್ ಬರೆಸಿ ಹಾಕುವ ನಾಟಕಗಳನ್ನೆಲ್ಲ ನಿಲ್ಲಿಸಿ. ಮೊದಲು 40% ಕಮಿಷನ್ ಆರೋಪವೂ ಸೇರಿದಂತೆ ಸಚಿವರುಗಳ ಮೇಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ನನಗೆ ಲಂಚ ಕೊಡಬೇಕಿಲ್ಲ ನಾನು ಭ್ರಷ್ಟ ಅಧಿಕಾರಿ ಆಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಕಡ್ಡಾಯವಾಗಿ ಹಾಕುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಗಳನ್ನು ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.
ಸಿದ್ದರಾಮಯ್ಯ ಟ್ವೀಟ್ ನಲ್ಲಿ, ನನಗೆ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ” ಎಂದು ಸರ್ಕಾರಿ ಕಚೇರಿಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರ ಬೋರ್ಡ್ ಹಾಕಿಸುತ್ತಂತೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಮೊದಲು ನಿಮ್ಮ ಮತ್ತು ಸಚಿವರ ಕಚೇರಿಗಳು ಹಾಗೂ ಮನೆ ಮುಂದೆ ಈ ಬೋರ್ಡ್ ಹಾಕಿಸಿ

ಸರ್ಕಾರಿ ಗುತ್ತಿಗೆದಾರರು ಲಂಚದ ಆರೋಪ ಮಾಡಿರುವುದು ಸಚಿವರ ಮೇಲೆ, ಅಧಿಕಾರಿಗಳ ಮೇಲೆ ಅಲ್ಲ. ಅಧಿಕಾರಿಗಳನ್ನು ತೋರಿಸಿ ಲಂಚ/ಕಮಿಷನ್ ಆರೋಪದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಬೇಡ. ಲಂಚಾವತಾರ ನಾಟಕದಲ್ಲಿ ಅಧಿಕಾರಿಗಳದ್ದು ಪೋಷಕ ಪಾತ್ರ, ಬಿಜೆಪಿ ಸರ್ಕಾರದ ಇಲಾಖಾ ಸಚಿವರದ್ದೇ ಮುಖ್ಯ ಪಾತ್ರ.
ಸಚಿವರಿಂದ ರಕ್ಷಣೆಯ ಅಭಯ ಇಲ್ಲದೆ ಯಾವ ಅಧಿಕಾರಿಯೂ ಲಂಚಕ್ಕೆ ಕೈಯೊಡ್ಡುವ ಸಾಹಸ ಮಾಡುವುದಿಲ್ಲ. ಸಚಿವರು ಪ್ರಾಮಾಣಿಕವಾಗಿದ್ದಾಗ ಸರ್ಕಾರಿ ಅಧಿಕಾರಿಗಳು ಕೂಡಾ ಪ್ರಾಮಾಣಿಕವಾಗಿರುತ್ತಾರೆ. ಸಚಿವರು ಭ್ರಷ್ಟರಾದಾಗ “ಯಥಾ ರಾಜಾ ತಥಾ ಪ್ರಜಾ” ಅಷ್ಟೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಸರ್ಕಾರಿ ಕಚೇರಿಗಳಲ್ಲಿ “ಲಂಚ ಕೊಡಬೇಕಾಗಿಲ್ಲ” ಎಂಬ ಬೋರ್ಡ್ ಅಳವಡಿಸುವ ಮೊದಲು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ. ನೊಂದ ಜನರು ದೂರು ಕೊಟ್ಟರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.









