ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ನಡೆ ಖಂಡಿಸಿ ಸಿಎಂ ಕಚೇರಿ ಮುತ್ತಿಗೆಗೆ ಯತ್ನಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೀದರ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ನಾಟಕದಲ್ಲಿ ಸಿಎಎ ಹಾಗೂ ಎನ್ ಆರ್ ಸಿ ಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ನಕಾರಾತ್ಮಕವಾಗಿ ತೋರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕರ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಪ್ರಕರಣ ಹಾಗೂ ಪೋಷಕರೊಬ್ಬರ ಬಂಧನವನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಇಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಯಿಂದ ಪ್ರತಿಭಟನಾ ಮೆರವಣಿಗೆ ಕೈಗೊಂಡಿತ್ತು.
ಪ್ರತಿಭಟನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಂಸದ ಡಿ.ಕೆ ಸುರೇಶ್, ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಪ್ರತಿಭಟನೆಯಲ್ಲಿ ದಿನೇಶ್ ಗುಂಡೂರಾವ್ ಹಾಗೂ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಬ್ಯಾರಿಕೇಡ್ ದಾಟಿ ಸಿಎಂ ಗೃಹ ಕಚೇರಿಯತ್ತ ಹೋಗಲು ಯತ್ನಿಸಿದರು. ಈ ವೇಳೆ ಅವರನ್ನು ತಡೆಹಿಡಿದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮ್ಮನ್ನು ವಶಕ್ಕೆ ಪಡೆದ ಪೊಲೀಸರ ಕ್ರಮವನ್ನು ಸಿದ್ದರಾಮಯ್ಯ ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ.








