ಬೆಂಗಳೂರು: ಪಾದರಾಯನಪುರ ಘಟನೆಯ ಬಗ್ಗೆ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಶಾಸಕ ಜಮೀರ್ ಅಹ್ಮದ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ದೂರವಾಣಿ ಕರೆ ಮಾಡಿ ಮಾತನಾಡಿದ ಸಿದ್ದರಾಮಯ್ಯ, ಇಂತಹ ಸಂದರ್ಭದಲ್ಲಿ ಸರ್ಕಾರದ ಜೊತೆ ಕೈಜೋಡಿಸಬೇಕು. ಪೊಲೀಸ್, ವೈದ್ಯಕೀಯ ಸಿಬ್ಬಂದಿ ನಮ್ಮ ಜೀವ ಉಳಿಸಲು ಹೋರಾಡುತ್ತಿದ್ದಾರೆ. ಅವರ ಮೇಲೆ ಹಲ್ಲೆ ಸರಿಯಲ್ಲ. ಕ್ಷೇತ್ರದ ಜನರಿಗೆ ಮನೆಯಿಂದ ಹೊರ ಬರದಂತೆ ಮನವಿ ಮಾಡಬೇಕು, ಎಚ್ಚರಿಕೆಯಿಂದ ಹೇಳಿಕೆ ನೀಡಬೇಕು. ಇಲ್ಲ ಸಲ್ಲದ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿರೋದು ಯಾಕೆ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
ಇನ್ನು ಈ ಬಗ್ಗೆ ಶಾಸಕ ಜಮೀರ್ ಪ್ರತಿಕ್ರಿಯೆ ನೀಡಿದ್ದು, ಚಾಮರಾಜಪೇಟೆಯಲ್ಲಿ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಜೊತೆಗೆ, ನನಗೆ ಸಿದ್ಧರಾಮಯ್ಯ ಸಾಹೇಬ್ರು ಫೋನ್ ಮಾಡಿದ್ರು.. ಅವರಿಗೆ ಪರಿಸ್ಥಿತಿಯನ್ನು ವಿವರಿಸಿದ್ದೇನೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡಿದ ಅವರು, ನನ್ನನ್ನು ಕೇಳಿ ನನ್ನ ಕ್ಷೇತ್ರಕ್ಕೆ ಬರಬೇಕು ಎಂದು ನಾನು ಎಲ್ಲೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ನಿನ್ನೆ ಕ್ವಾರೆಂಟೈನ್‌ಗೆ ಒಳಪಡಬೇಕಾದ 38 ಮಂದಿಯನ್ನು ನಾನೇ ಇಂದು ಕಳುಹಿಸಿಕೊಡುತ್ತಿದ್ದೇನೆ. ಇಲ್ಲಿ ಗಲಾಟೆ ಮಾಡಿರುವವರ ವಿರುದ್ಧ ಕ್ರಮ ಆಗಲೇಬೇಕು. ಇದಕ್ಕೆ ನನ್ನ ಸಹಮತ ಇದೆ ಎಂದು ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.