ಗಂಗಾವತಿ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಕುರಿತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮಹತ್ವದ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದಾಖಲೆಯನ್ನು ಮುರಿದು, ಪೂರ್ವ ನಿರ್ಧಾರಿತ ಒಪ್ಪಂದದಂತೆ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ ಎಂದು ರೆಡ್ಡಿ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಆಂತರಿಕ ವಿದ್ಯಮಾನಗಳು ಮತ್ತು ಅಧಿಕಾರ ಹಂಚಿಕೆಯ ಕುರಿತು ಸ್ಫೋಟಕ ಮಾಹಿತಿಗಳನ್ನು ಹಂಚಿಕೊಂಡರು.
2023ರ ವಿಧಾನಸಭಾ ಚುನಾವಣೆಯ ನಂತರ ಸರ್ಕಾರ ರಚನೆಯ ಸಂದರ್ಭದಲ್ಲಿಯೇ ಕಾಂಗ್ರೆಸ್ ಹೈಕಮಾಂಡ್ ಸಮ್ಮುಖದಲ್ಲಿ ಅಧಿಕಾರ ಹಂಚಿಕೆಯ ಒಳ ಒಪ್ಪಂದ ನಡೆದಿದೆ. ಇದರ ಪ್ರಕಾರ, ಸಿದ್ದರಾಮಯ್ಯನವರು ಮೊದಲೆರಡು ವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಈ ಅವಧಿಯಲ್ಲಿ ಅವರು ರಾಜ್ಯದ ದೀರ್ಘಕಾಲದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿರುವ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯುವ ತಮ್ಮ ವೈಯಕ್ತಿಕ ಸಂಕಲ್ಪವನ್ನು ಈಡೇರಿಸಿಕೊಳ್ಳಲಿದ್ದಾರೆ. ಆ ದಾಖಲೆ ನಿರ್ಮಾಣವಾದ ಬಳಿಕ, ಸ್ವತಃ ಸಿದ್ದರಾಮಯ್ಯನವರೇ ರಾಜೀನಾಮೆ ನೀಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ಸ್ಥಾನವನ್ನು ಬಿಟ್ಟುಕೊಡಲಿದ್ದಾರೆ ಎಂದು ಜನಾರ್ದನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯನವರ ಆಪ್ತ ವಲಯದಿಂದಲೇ ಈ ಮಾಹಿತಿ ಲಭ್ಯವಾಗಿದ್ದು, ಉಳಿದ ಅವಧಿಗೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದು ಖಚಿತ ಎಂದು ರೆಡ್ಡಿ ಪ್ರತಿಪಾದಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಈ ನಾಯಕತ್ವದ ಹಗ್ಗಜಗ್ಗಾಟ ಮತ್ತು ರಾಜಕೀಯ ಮೇಲಾಟಗಳಿಂದಾಗಿ ಆಡಳಿತ ಯಂತ್ರ ಸಂಪೂರ್ಣವಾಗಿ ಸ್ತಬ್ಧವಾಗಿದೆ ಎಂದು ರೆಡ್ಡಿ ಕಳವಳ ವ್ಯಕ್ತಪಡಿಸಿದರು. ಅಧಿಕಾರಿಗಳು ಯಾರ ಆದೇಶವನ್ನು ಪಾಲಿಸಬೇಕು ಎಂಬ ಗೊಂದಲದಲ್ಲಿದ್ದಾರೆ, ಇದರಿಂದಾಗಿ ಸಾಮಾನ್ಯ ಜನರ ಕೆಲಸಗಳು ಆಗುತ್ತಿಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಶೀತಲ ಸಮರ, ಸೋಶಿಯಲ್ ಮೀಡಿಯಾಗಳಲ್ಲಿ ನಡೆಯುತ್ತಿರುವ ಪರೋಕ್ಷ ವಾಕ್ಸಮರಗಳು ಇದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಟೀಕಿಸಿದರು. ಆದಾಗ್ಯೂ, ಕಾಂಗ್ರೆಸ್ ಹೈಕಮಾಂಡ್ ಪ್ರಬಲವಾಗಿದ್ದು, ಈ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸಿ ಸುಗಮ ಅಧಿಕಾರ ಹಸ್ತಾಂತರಕ್ಕೆ ವೇದಿಕೆ ಕಲ್ಪಿಸಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಅಭಿವೃದ್ಧಿಯಲ್ಲಿ ರಾಜಕೀಯ ಮಾಡದ ಸಿದ್ದರಾಮಯ್ಯ
ಇದೇ ವೇಳೆ, ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಗಂಗಾವತಿ ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೋರಿರುವ ಕಾಳಜಿಯನ್ನು ಜನಾರ್ದನ ರೆಡ್ಡಿ ಮುಕ್ತಕಂಠದಿಂದ ಶ್ಲಾಘಿಸಿದರು.
ನಾನು ಬೇರೆ ಪಕ್ಷದ ಶಾಸಕನಾಗಿದ್ದರೂ, ಗಂಗಾವತಿ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ತಾರತಮ್ಯ ಮಾಡಿಲ್ಲ. ಗಂಗಾವತಿಯ ಕನಕಗಿರಿ ರಸ್ತೆಗೆ ಹೊಂದಿಕೊಂಡಂತೆ ಸುಸಜ್ಜಿತ ಸ್ಯಾಟಲೈಟ್ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣ ನಿರ್ಮಾಣಕ್ಕಾಗಿ 17.50 ಕೋಟಿ ರೂಪಾಯಿಗಳ ಅನುದಾನಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ. ಈಗಾಗಲೇ ಕೃಷಿ ವಿಜ್ಞಾನ ಕೇಂದ್ರದ ಜಾಗವನ್ನು ಸಾರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಅಂತರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವಾಗಿರುವ ಗಂಗಾವತಿಗೆ ಬರುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣವಾಗಲಿದೆ. ಈ ಕಾರ್ಯಕ್ಕಾಗಿ ಗಂಗಾವತಿಯ ಸಮಸ್ತ ಜನರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ರೆಡ್ಡಿ ತಿಳಿಸಿದರು.








