ಬೆಂಗಳೂರು : ಹೆಮ್ಮಾರಿ ಕೊರೊನಾ ವೈರಸ್ ಗೆ ತುತ್ತಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೋಂಕಿನಿಂದ ಗುಣಮುಖರಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಈ ಬಗ್ಗೆ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು. ಸಿದ್ದರಾಮಯ್ಯ ಅವರು ಕೋವಿಡ್ 19 ನಿಂದ ಈಗ ಪೂರ್ಣ ಗುಣಮುಖರಾಗಿದ್ದಾರೆ. ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಾದ ಮೊದಲ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿಸಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ. ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಸಿದ್ದರಾಮಯ್ಯ ಅವರಿಗೆ ಕಳೆದ ಮಂಗಳವಾರ ಕೊರೊನಾ ಪಾಸಿಟಿವ್ ಬಂದಿತ್ತು. ಈ ಬಗ್ಗೆ ಆಗಸ್ಟ್ 9ರಂದು ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಶನಿವಾರ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದ್ದರು.








