ಬೆಂಗಳೂರು: ಹಾಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿದೆ.
ಈ ಹಿನ್ನೆಲೆಯಲ್ಲಿ ಇಬ್ಬರೂ ನಾಯಕರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಶೇಷ ಅಂದರೆ ಹಾಲಿ ಹಾಗೂ ಮಾಜಿ ಸಿಎಂಗಳಿಗಿಬ್ಬರೂ ಒಂದೇ ಆಸ್ಪತ್ರೆಯ ಅಕ್ಕಪಕ್ಕದ ಕೊಠಡಿಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ವಿಶೇಷ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭಾನುವಾರ ರಾತ್ರಿ ಆಸ್ಪತ್ರೆಗೆ ದಾಖಲಾದರೆ, ಸೋಮವಾರ ರಾತ್ರಿ(ಕಳೆದ ರಾತ್ರಿ) ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರೂ ನಾಯಕರಿಗೆ ಸೋಂಕಿನ ಲಕ್ಷಣಗಳು ಇರಲಿಲ್ಲ. ಯಡಿಯೂರಪ್ಪ ಅವರಿಗೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಬಂದಿತ್ತು. ನಿನ್ನೆ ಬೆಳಿಗ್ಗೆ ಸಿದ್ದರಾಮಯ್ಯ ಅವರಿಗೆ ಜ್ವರ ಹಾಗೂ ಮೂತ್ರಕೋಶದ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಾದ ಸಿದ್ದರಾಮಯ್ಯ ಅವರಿಗೆ ಅಂಟಿಜೆನ್ ಟೆಸ್ಟ್ ಮಾಡಿಸಿದಾಗ ಕೊರೊನಾ ದೃಢಪಟ್ಟಿದೆ.
ಮಣಿಪಾಲ್ ಆಸ್ಪತ್ರೆ ವೈದ್ಯರ ಡಾ.ಸುದರ್ಶನ್ ಬಲ್ಲಾಳ್ ನೇತೃತ್ವದಲ್ಲಿ ಹಾಲಿ-ಮಾಜಿ ಸಿಎಂಗಳಿಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಬೆಳಿಗ್ಗೆ ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ. ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ.
ಬಿಎಸ್ವೈ-ಸಿದ್ದು ಮನೆ ಸೀಲ್ಡೌನ್
ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಸಿದ್ದರಾಮಯ್ಯ ಅವರ ಶಿವಾನಂದ ವೃತ್ತ ಬಳಿಯ ಮನೆಗೆ ಸ್ಯಾನಿಟೈಸ್ ಮಾಡಿದ್ದಾರೆ.
ಇದೇ ವೇಳೆ ಸಿಎಂ ಬಿಎಸ್ವೈ ಅವರ ಕಾವೇರಿ ನಿವಾಸ ಹಾಗೂ ಮೈಸೂರಿನ ಸಿದ್ದರಾಮಯ್ಯ ಅವರ ರಾಮಕೃಷ್ಣ ನಗರದ ಮನೆಯನ್ನು ಸೀಲ್ಡೌನ್ ಮಾಡಲಾಗಿದೆ.
ಜತೆಗೆ ಮೈಸೂರಿನಲ್ಲಿ ಸಿದ್ದರಾಮಯ್ಯ ಅವರು ಪತ್ರಕರ್ತರ ಜತೆ ಸಂವಾದ ಹಾಗೂ ಸುದ್ದಿಗೊಷ್ಠಿ ನಡೆಸಿದ್ದ ಹಿನ್ನೆಲೆಯಲ್ಲಿ ಪತ್ರಿಕಾ ಭವನವನ್ನೂ ಸೀಲ್ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಂವಾದದಲ್ಲಿ ಪಾಲ್ಗೊಂಡ ಪತ್ರಕರ್ತರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.