ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅನಾರೋಗ್ಯದ ಕಾರಣ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಇಂದು (ಶುಕ್ರವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
78 ವರ್ಷದ ಸೋನಿಯಾ ಗಾಂಧಿ ಅವರನ್ನು ನಿನ್ನೆ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಅನಾರೋಗ್ಯದ ಸ್ಪಷ್ಟ ಕಾರಣ ಮತ್ತು ಚಿಕಿತ್ಸೆಯ ಕುರಿತು ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದಾಗ್ಯೂ, ಅವರನ್ನು ವೈದ್ಯರ ವಿಶೇಷ ತಂಡದ ನಿಗಾದಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ವಾರ, ಫೆಬ್ರವರಿ 13ರಂದು ನಡೆದ ಸಂಸತ್ತಿನ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಸೋನಿಯಾ ಗಾಂಧಿ ಅವರು ರಾಜ್ಯಸಭೆಯಲ್ಲಿ ಕಾಣಿಸಿಕೊಂಡಿದ್ದರು. ಅದಾದ ಬಳಿಕ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪಕ್ಷದ ನಾಯಕರೂ ಸೇರಿದಂತೆ ಅವರ ಅಭಿಮಾನಿಗಳು ಆಶಿಸುತ್ತಿದ್ದಾರೆ.








