ಎಸ್ ಎಸ್ ಎಲ್ ಸಿ ಪರೀಕ್ಷೆ | ಸಚಿವರ ಗುದ್ದಾಟಕ್ಕೆ ಸಿಎಂ ಫುಲ್ ಸ್ಟಾಪ್ SSLC Exam
ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ವಿಚಾರವಾಗಿ ಆರೋಗ್ಯ ಸಚಿವ ಮತ್ತು ಶಿಕ್ಷಣ ಸಚಿವರ ಮಧ್ಯೆ ಮುಸುಕಿನ ಗುದ್ದಾಟ ನಡೆದಿದೆ.
ಆರೋಗ್ಯ ಇಲಾಖೆಗೆ ಮಾಹಿತಿ ನೀಡದೆ, ತಜ್ಞರ ಸಮಿತಿ ಅಭಿಪ್ರಾಯ ಪಡೆಯದೇ ಏಕಪಕ್ಷೀಯವಾಗಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ದಿನಾಂಕ ಪ್ರಕಟಿಸಲಾಗಿದೆ ಎಂದು ಆರೋಗ್ಯ ಸಚಿವರು ಹೇಳಿದ್ದರು.
ಇದಕ್ಕೆ ವ್ಯತಿರಿಕ್ತವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿ ಚರ್ಚಿಸಿಯೇ ದಿನಾಂಕ ಪ್ರಕಟ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿದ್ದರು.
ಇದು ಉಭಯ ಸಚಿವರ ನಡುವೆ ಹೊಂದಾಣಿಕೆ ಕೊರತೆಯ ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವಿಟ್ಟರ್ ನಲ್ಲಿ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದಾರೆ.
ಈ ಕುರಿತು ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.