ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಕಾರಣ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ರದ್ದಾಗಿದೆ ಎಂಬ ಸುದ್ದಿ ಅಪ್ಪಟ ಸುಳ್ಳು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ವೈರಸ್ ಸೋಕಿನ ಕಾರಣಕ್ಕಾಗಿ ಭಾರತಾದ್ಯಂತ ಬಂದ್ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೊರೊನಾ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಲಾಗಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ರದ್ದು ಮಾಡಲಾಗಿದೆ ಎಂಬ ಸುದ್ದಿ ವೈರಲ್ ಆಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಗೊಂದಲಕ್ಕೆ ಒಳಗಾಗಿದ್ದರು.
ಈ ಹಿನ್ನಲೆಯಲ್ಲಿ ಸಚಿವ ಸುರೇಶ್ ಕುಮಾರ್ ಟ್ವೀಟ್ ಮೂಲಕ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. “ಕೆಲ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತು ರದ್ದಾಗಿದೆ ಎಂಬ ಒಂದು ಅಪ್ಪಟ ಸುಳ್ಳು ಸುದ್ದಿ ಹರಿದಾಡುತ್ತಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ ರದ್ದು ಮಾಡುವ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪರೀಕ್ಷೆಗಳ ಕುರಿತು ಚರ್ಚಿಸಲು ಯಾವುದೇ ಸಭೆಯೂ ಆಗಿಲ್ಲ” ಎಂದಿದ್ದಾರೆ. ಕೊರೊನಾ ಕಾರಣದಿಂದಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಗೂ ಪಿಯುಸಿಯ ಬಾಕಿ ಉಳಿದ ಕೊನೆಯ ಪರೀಕ್ಷೆ ಮುಂದೂಡಲಾಗಿದೆಯಷ್ಟೇ. ಇದನ್ನು ಕೆಲವರು ದುರುಪಯೋಗ ಪಡಿಸಿಕೊಂಡು ಸುಳ್ಳು ಸುದ್ದಿಯನ್ನು ಹರಡುತ್ತಿದ್ದಾರೆ. ವಿದ್ಯಾರ್ಥಿಗಳು ತಮ್ಮ ಅಭ್ಯಾಸವನ್ನು ಮುಂದುವರಿಸಬೇಕಾಗಿದ್ದು, ಪರೀಕ್ಷೆಗಳನ್ನು ರದ್ದು ಮಾಡುವ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ








