ಬೆಂಗಳೂರು : ಎಸ್.ಎಸ್.ಎಲ್ ಸಿ ಪರೀಕ್ಷೆ ಗೆ ಇನ್ನೂ ಎರಡು ದಿನ ಮಾತ್ರ ಬಾಕಿಯಿದೆ. ಮೊದಲಿಂದಲೂ ಎಸ್.ಎಸ್.ಎಲ್ ಸಿ ಪರೀಕ್ಷೆ ರದ್ದು ಮಾಡಬೇಕು ಎಂಬ ಕೂಗು ಕೇಳಿ ಬಂದಿತ್ತು. ಇದೀಗ ಮಾಜಿ ಸಿಎಂ ಹೆಚ್.ಡಿ,ಕುಮಾರಸ್ವಾಮಿ ಎಸ್.ಎಸ್.ಎಲ್ ಸಿ ಪರೀಕ್ಷೆ ನಡೆಸುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದ್ದಾರೆ.
ಅಲ್ಲದೆ ರಾಜ್ಯ ಸರ್ಕಾರ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ.
ಕರೋನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿರುವ ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು ಎಂಟು ಲಕ್ಷ SSLC ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ.
ಕರೋನಾ ಸೋಂಕು ಸಮುದಾಯ ಪ್ರಸರಣ ಭೀತಿಯ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ರಾಜ್ಯದಲ್ಲಿ SSLC ಪರೀಕ್ಷೆಯನ್ನು ರದ್ದುಪಡಿಸಿ ಉತ್ತೀರ್ಣ ಗೊಳಿಸಲಾಗಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು. ಪರೀಕ್ಷೆಗಳನ್ನು ನಡೆಸಲೇ ಬೇಕೆಂದರೆ ಅಕ್ಟೋಬರ್ ತಿಂಗಳವರೆಗೆ ಕಾಯಲಿ.
ಏನಾದರೂ ಅವಗಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡುತ್ತೇನೆ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.