ನಿತ್ಯೋತ್ಸವ ಕವಿ, ಹಿರಿಯ ಸಾಹಿತಿ ನಿಸಾರ್ ಅಹಮದ್ (84) ಅವರು ಇಂದು ಬೆಂಗಳೂರಿನ ಪದ್ಮನಾಭನಗರದ ತಮ್ಮ ನಿವಾಸದಲ್ಲಿ ನಿಧನರಾದರು. ಅವರ ನಿಧನಕ್ಕೆ ರಾಜ್ಯ ಕಾಂಗ್ರೆಸ್ ಕಂಬನಿ ಮಿಡಿದಿದೆ.
ನಿಸಾರ್ ಅಹಮದ್ ಅವರ ನಿಧನಕ್ಕೆ ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಸಿದ್ದರಾಮಯ್ಯ, ಕವಿ ಪ್ರೊ.ಕೆ.ಎಸ್.ನಿಸಾರ್ ಅಹ್ಮದ್ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ತುಂಬಿಬಾರದ ನಷ್ಟ. ‘ಯಾವ ಪಂಥ-ಪಂಗಡಕ್ಕೆ ಕಟ್ಟಿಕೊಳ್ಳದೆ ಸ್ಚಚ್ಛಂದವಾಗಿ ಹಕ್ಕಿಯಂತೆ ಕಾವ್ಯಕಟ್ಟುತ್ತಾ ಸರ್ವಜನ ಪ್ರಿಯರಾಗಿದ್ದ ನಿಸಾರ್ ಅಹ್ಮದ್ ಅವರ ಕಾಯ ಅಳಿದರೂ ಅವರ ಕಾವ್ಯದ ಮೂಲಕ ನಮ್ಮ ನೆನಪಲ್ಲಿ ಸದಾ ಜೀವಂತ. ನನ್ನ ಗೌರವಪೂರ್ಣ ಸಂತಾಪಗಳು’ ಎಂದಿದ್ದಾರೆ.
ಕೆ.ಎಸ್ ನಿಸಾರ್ ಅಹಮದ್ ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ ಎಂದು ಹೇಳಿರುವ ಕರ್ನಾಟಕ ಕಾಂಗ್ರೆಸ್ ಪಕ್ಷ, ‘ತಮ್ಮ ಭಾವಗೀತೆಗಳ ಮೂಲಕ ಕನ್ನಡಿಗರ ಮನೆಮಾತಾಗಿದ್ದ, 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ, ಹಿರಿಯ ಸಾಹಿತಿ, ನಿತ್ಯೋತ್ಸವದ ಕವಿ, ನಾಡೋಜ ಕೆ.ಎಸ್ ನಿಸಾರ್ ಅಹಮದ್ ಅವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ, ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿ ಲಭಿಸಲಿ’ ಎಂದು ತಿಳಿಸಿದೆ.
ನಿಸಾರ್ ಅಹಮದ್ ಅವರನ್ನು ಕಳೆದುಕೊಂಡಿರುವುದು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಎಂದಿರುವ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ, ‘6 ದಶಕಗಳಿಂದ ಕನ್ನಡ ಸಾಹಿತ್ಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಮೇರು ಸಾಹಿತಿ, ಪ್ರಾಧ್ಯಾಪಕರು ಹಾಗೂ ನಿತ್ಯೋತ್ಸವ ಕವಿ ಕೆ.ಎಸ್ ನಿಸಾರ್ ಅಹಮದ್ ಅವರನ್ನು ಕಳೆದುಕೊಂಡಿರುವುದು ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ. ಅವರ ಹಿತೈಷಿಗಳು & ಕುಟುಂಬ ವರ್ಗಕ್ಕೆ ದೇವರು ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ..