6ರಿಂದ 8ನೇ ತರಗತಿಗಳನ್ನು ಫೆ. 22ರಿಂದ ಪ್ರಾರಂಭಿಸಲು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ
ಬೆಂಗಳೂರು, ಫೆಬ್ರವರಿ19: ರಾಜ್ಯ ಸರ್ಕಾರ 6ರಿಂದ 8ನೇ ತರಗತಿಗಳನ್ನು ಫೆ. 22ರಿಂದ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಲು ಇಂದು ಅಧಿಕೃತ ಆದೇಶ ಹೊರಡಿಸಿದೆ. ಇದಕ್ಕೆ ಸಂಬಂಧಿಸಿದಂತೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಆರೋಗ್ಯ ಇಲಾಖೆಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.
ಬೆಂಗಳೂರು ನಗರ ದಕ್ಷಿಣ ಕನ್ನಡ ಸೇರಿದಂತೆ ಕೇರಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದೆಡೆ 6ನೇ ತರಗತಿಯಿಂದ 8ನೇ ತರಗತಿಯವರೆಗೆ ಪ್ರತಿ ದಿನ ಪೂರ್ಣಾವಧಿ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ.
6ನೇ ತರಗತಿಯಿಂದ 8ನೇ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪಾಲಕರ ಅಥವಾ ಪೋಷಕರ ಒಪ್ಪಿಗೆ ಪತ್ರ ತರುವುದು ಕಡ್ಡಾಯವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು(ಪ್ರೌಢ ಶಿಕ್ಷಣ) ಸುತ್ತೋಲೆ ಹೊರಡಿಸಿದ್ದು, ತರಗತಿಗೆ ಹಾಜರಾಗಬೇಕು ಎಂಬ ಕಡ್ಡಾಯ ನಿಯಮವಿಲ್ಲ ಎಂದು ಸೂಚಿಸಲಾಗಿದೆ.
ಕೇರಳದಿಂದ ಬರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕೋವಿಡ್-19 ನೆಗೆಟಿವ್ ಫಲಿತಾಂಶವಿದ್ದರೆ ಮಾತ್ರ ಶಾಲೆಗೆ ಹಾಜರಾಗಬೇಕು.
ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಮನೆಯಿಂದಲೇ ತರುವಂತೆ ಸೂಚಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.