ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಸಮಯದಲ್ಲಿ ಮತ ಹಾಕಿಸಿಕೊಳ್ಳುವಾಗ ಮುಸ್ಲಿಮರು ಸ್ಥಳೀಯರಾಗಿ ಕಂಡಿದ್ದರು, ಆದರೆ ಈಗ ರಾಜಕೀಯ ಕಾರಣಕ್ಕಾಗಿ ಅವರನ್ನು ಬಾಂಗ್ಲಾದೇಶದವರು ಎಂದು ಕರೆಯುತ್ತಿರುವುದು ಕುಮಾರಸ್ವಾಮಿ ಅವರ ದ್ವಂದ್ವ ನೀತಿಯನ್ನು ಎತ್ತಿ ತೋರಿಸುತ್ತದೆ ಎಂದು ಅವರು ಕಿಡಿಕಾರಿದ್ದಾರೆ.
ನಗರದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾಲಕೃಷ್ಣ, ಎಸ್‌ಐಆರ್ ಅಂದರೆ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಒಂದು ಕೋಮಿನ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಾ, ಜನರಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿರುವ ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಎಚ್‌ಡಿಕೆ ಗುರಿ ಮಾಡುತ್ತಿರುವುದು ಖಂಡನೀಯ. ಈ ಪ್ರಕ್ರಿಯೆಯು ಸಂಪೂರ್ಣವಾಗಿ ಕೇಂದ್ರ ಚುನಾವಣಾ ಆಯೋಗದ ಅಡಿಯಲ್ಲಿ ನಡೆಯುತ್ತಿದೆ. ಇದು ರಾಜ್ಯ ಸರ್ಕಾರದ ನಿಯಂತ್ರಣದಲ್ಲಿಲ್ಲ ಎಂಬ ಸತ್ಯ ಗೊತ್ತಿದ್ದರೂ, ಅಧಿಕಾರಿಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಯುತ್ತಿದೆ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಅವಮಾನ ಮಾಡುವುದು ಸರಿಯಲ್ಲ ಎಂದು ಅವರು ಎಚ್ಚರಿಸಿದರು.
ಚುನಾವಣಾ ಆಯೋಗದ ಕಟ್ಟುನಿಟ್ಟಿನ ನಿಯಮಗಳ ಪ್ರಕಾರವೇ ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿದೆ. ಅಗತ್ಯ ದಾಖಲೆಗಳನ್ನು ಒದಗಿಸದೆ ಮತದಾರರ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇಂತಹ ಪಾರದರ್ಶಕ ವ್ಯವಸ್ಥೆಯಲ್ಲಿ ಅಕ್ರಮ ಎಸಗಲು ಹೇಗೆ ಸಾಧ್ಯ? ಕೇವಲ ರಾಜಕೀಯ ಪ್ರಚಾರಕ್ಕಾಗಿ ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಬಾಲಕೃಷ್ಣ ಅವರು ಕುಮಾರಸ್ವಾಮಿ ಅವರ ಹೇಳಿಕೆಗಳನ್ನು ತಳ್ಳಿಹಾಕಿದರು.








