ಹೊರ್ಮುಜ್ ಜಲಮಾರ್ಗದಲ್ಲಿ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಹಡಗಿನ ಮೇಲಿನ ದಾಳಿಗೆ ಪ್ರತಿಯಾಗಿ ಅಮೆರಿಕ ಪಡೆಗಳು ಇರಾನ್ ಮೇಲೆ ರಾತ್ರೋರಾತ್ರಿ ದಾಳಿ ನಡೆಸಿರುವುದಾಗಿ ಯುಎಸ್ ಸೆಂಟ್ರಲ್ ಕಮಾಂಡ್ ತಿಳಿಸಿದೆ.
ಅಮೆರಿಕ ನಡೆಸಿದ ಕ್ಷಿಪಣಿ ದಾಳಿಯ ಸಂದರ್ಭದಲ್ಲಿ ದಕ್ಷಿಣ ಇರಾನ್ನ ಸಿರಿಕ್ ಪ್ರದೇಶದಲ್ಲಿ ವಿವಾಹ ಸಮಾರಂಭ ನಡೆಯುತ್ತಿದ್ದ ಮನೆಯೊಂದರ ಮೇಲೆ ದಾಳಿಯ ತುಣುಕುಗಳು ಬಿದ್ದಿವೆ ಎನ್ನಲಾಗಿದೆ. ಘಟನೆಯಲ್ಲಿ ಒಂದು ಮಗು ಸೇರಿದಂತೆ ಸುಮಾರು ನಾಲ್ವರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅಮೆರಿಕಕ್ಕೆ ಕಠಿಣ ಎಚ್ಚರಿಕೆ
ಘಟನೆಗೆ ಪ್ರತಿಕ್ರಿಯಿಸಿರುವ ಇರಾನ್ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ, ಅಮೆರಿಕ ಈ ದಾಳಿಗೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಅಮೆರಿಕ ಈ ದಾಳಿಗಾಗಿ ವಿಷಾದಿಸುವಂತಹ ಪರಿಸ್ಥಿತಿ ಎದುರಾಗಲಿದೆ ಎಂದು ಅವರು ಹೇಳಿದ್ದಾರೆ.ಅಮೆರಿಕ ಪಡೆಗಳಿಗೆ ಕಠಿಣ ಶಿಕ್ಷೆ ನೀಡಲು ಇರಾನ್ ಪಡೆಗಳು ಸಿದ್ಧವಾಗಿವೆ ಎಂದು ಅವರು ಎಚ್ಚರಿಸಿದ್ದು, ಮುಂದಿನ ದಿನಗಳಲ್ಲಿ ಸಂಘರ್ಷ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ವ್ಯಕ್ತವಾಗಿದೆ.
ಅಮೆರಿಕದ ಸೇನಾ ನೆಲೆಗಳಿಗೆ ಇರಾನ್ ಪ್ರತಿದಾಳಿ?
ಇರಾನ್ನಿಂದಲೂ ಪ್ರತಿದಾಳಿ ನಡೆಯುವ ಸಾಧ್ಯತೆ ಕುರಿತು ಎಚ್ಚರಿಕೆ ಕೇಳಿಬಂದಿದೆ. ಬಹ್ರೇನ್, ಕುವೈತ್ ಮತ್ತು ಜೋರ್ಡಾನ್ನಲ್ಲಿ ಇರುವ ಅಮೆರಿಕದ ಸೇನಾ ನೆಲೆಗಳು ಇರಾನ್ನ ಸಂಭವನೀಯ ಪ್ರತಿದಾಳಿಯ ಗುರಿಯಾಗಬಹುದು ಎಂಬ ಆತಂಕ ಎದುರಾಗಿದೆ.
ಹೊರ್ಮುಜ್ ಜಲಮಾರ್ಗವು ಜಾಗತಿಕ ತೈಲ ಸಾಗಣೆಗೆ ಅತ್ಯಂತ ಪ್ರಮುಖ ಮಾರ್ಗವಾಗಿರುವುದರಿಂದ, ಇಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮಧ್ಯಪ್ರಾಚ್ಯ ಮಾತ್ರವಲ್ಲದೆ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಅಮೆರಿಕ–ಇರಾನ್ ಸಂಘರ್ಷ ಮುಂದುವರಿದರೆ ತೈಲ ಸಾಗಣೆ ಮತ್ತು ಅಂತರರಾಷ್ಟ್ರೀಯ ವ್ಯಾಪಾರದ ಮೇಲೂ ಹೆಚ್ಚಿನ ಒತ್ತಡ ಉಂಟಾಗುವ ಆತಂಕ ವ್ಯಕ್ತವಾಗಿದೆ.








