ನವೀನ್ ಪಾರ್ಥಿವ ಶರೀರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ ಸಿಎಂ ಬೊಮ್ಮಾಯಿ
ಬೆಂಗಳೂರು: ರಷ್ಯಾ ಹಾಗೂ ಉಕ್ರೇನ್ ನಡುವಿನ ಸಂಘರ್ಷದಲ್ಲಿ ಮೃತಪಟ್ಟಿದ್ದ ನವೀನ್ ಶೇಖರಪ್ಪ ಗ್ಯಾನಗೌಡರ್ ಪಾರ್ಥಿವ ಶರೀರ ಕರ್ನಾಟಕ್ಕೆ ಆಗಮಿಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಪಾರ್ಥೀವ ಶರೀರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
ಮಾರ್ಚ್ 1ರಂದು ಮೃತಪಟ್ಟ ಹಾವೇರಿ ಜಿಲ್ಲೆಯ ಚಳ್ಳಗೇರಿಯ ನವೀನ್ ಶೇಖರಪ್ಪ ಗ್ಯಾನಗೌಡರ್ ಮೃತ ಎಮಿರೆಟ್ಸ್ ರಷ್ಯಾ ಹಾಗೂ ಉಕ್ರೇನ್ ನಡುವಿನ ಸಂಘರ್ಷದಲ್ಲಿ ಮೃತಪಟ್ಟಿದ್ದರು. ಇವರ ಪಾರ್ಥಿವ ಶರೀರ ದುಬೈ ಮೂಲಕ ಸೋಮವಾರ ಮುಂಜಾನೆ 3 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ್ ಉದಾಸಿ, ಸಚಿವ ಡಾ.ಕೆ.ಸುಧಾಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಇತರರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ನವೀನ್ ಮೃತದೇಹ ತೆಗೆದುಕೊಂಡು ಹೋಗಲು 22 ಮಂದಿ ನವೀನ್ ಕುಟುಂಬ ಸದಸ್ಯರು ಹಾಗೂ ಗ್ರಾಮದ ಮುಖಂಡರು ಆಗಮಿಸಿದ್ದರು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ನವೀನ್ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.
ಬೆಂಗಳೂರಿನಿಂದ ಆಂಬುಲೆನ್ಸ್ ಮೂಲಕ ಹೊರಟಿರುವ ನವೀನ್ ಮೃತದೇಹ ಬೆಳಗ್ಗೆ 9 ಗಂಟೆ ಸುಮಾರಿಗೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸಕ್ಕೆ ತಲುಪಲಿದೆ. ನವೀನ್ ಪಾರ್ಥಿವ ಶರೀರ ಆಗಮಿಸಿದ ಬಳಿಕ ಮೊದಲು ಕುಟುಂಬಸ್ಥರು ವೀರಶೈವ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಂತರ ನಿವಾಸದ ಮುಂದೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಿದ್ದಾರೆ. ಎರಡ್ಮೂರು ಗಂಟೆಗಳ ನಂತರ ಗ್ರಾಮದಲ್ಲಿ ನವೀನ್ ಪಾರ್ಥೀವ ಶರೀರವನ್ನು ಮೆರವಣಿಗೆ ನಡೆಸಲಾಗುತ್ತದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನವೀನ್ ತಂದೆ, ತಾಯಿ ಆತ ಮೆಡಿಕಲ್ ಮುಗಿಸಿ ಬಂದ ನಂತರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮ ಮಗನನ್ನು ಸ್ವಾಗತಿಸಬೇಕಿತ್ತು. ಆದರೆ, ಇಂದು ಆತನ ಪಾರ್ಥಿವ ಶರೀರ ಬೆಂಗಳೂರಿಗೆ ಬಂದಿರುವುದು ಬಹಳ ನೋವಿನ ಸಂಗತಿ. ಯೋಚನೆ ಮಾಡುವುದಕ್ಕೂ ಕಷ್ಟವಾಗುತ್ತದೆ ಎಂದರು.