ಬೆಂಗಳೂರು: ವಿಧಾನಪರಿಷತ್ತಿನ ಉಪ ಸಭಾಪತಿಯಾಗಿದ್ದ ಎಸ್.ಎಲ್ ಧರ್ಮೇಗೌಡರ ಹಠಾತ್ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಜ್ಜನ ವ್ಯಕ್ತಿಯಾಗಿದ್ದ ಧರ್ಮೇಗೌಡ ರು ಬೀರೂರು ಕ್ಷೇತ್ರದ ಶಾಸಕರಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಸಹಕಾರಿ ರಂಗದ ಹಿರಿಯ ಧುರೀಣರಾಗಿದ್ದರು. ಇತ್ತೀಚಿಗೆ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಉಪ ಸಭಾಪತಿಗಳಾಗಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೂಕ್ಷ್ಮ ಮನಸ್ಸಿನ ರಾಜಕಾರಿಣಿಯನ್ನು ಕಳೆದುಕೊಂಡ ನಾಡು ಬಡವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.
ಧರ್ಮೇಗೌಡ ರ ನಿಧನದಿಂದ ಮನಸ್ಸಿಗೆ ತೀವ್ರ ನೋವುಂಟಾಗಿದ್ದು, ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಹಾಗೂ ನನ್ನ ಆತ್ಮೀಯ ಸ್ನೇಹಿತರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ರಮೇಶ್ ಜಾರಕಿಹೊಳಿ ಕಂಬನಿ ಮಿಡಿದಿದ್ದಾರೆ.
ಡಿ.ಕೆ ಶಿವಕುಮಾರ್ ಸಂತಾಪ
ವಿಧಾನ ಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಸಾವಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. 
‘ಧರ್ಮೇಗೌಡ ಅವರ ಸಾವಿನ ಸುದ್ದಿ ಕೇಳಿ ಆಘಾತವಾಗಿದೆ. ಸಜ್ಜನ ಸ್ವಭಾವದ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದ ಅವರು ಈ ರೀತಿ ಅಂತ್ಯ ಕಂಡಿರುವುದು ನೋವಿನ ಸಂಗತಿ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ಸಂತಾಪ ನುಡಿಗಳಲ್ಲಿ ತಿಳಿಸಿದ್ದಾರೆ.
ನಳಿನ್‍ಕುಮಾರ್ ಕಟೀಲ್ ಸಂತಾಪ
ವಿಧಾನ ಪರಿಷತ್ತಿನ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ಧರ್ಮೇಗೌಡರ ಅಕಾಲಿಕ ನಿಧನದಿಂದ ರಾಜ್ಯವು ಓರ್ವ ಅತ್ಯುತ್ತಮ ಸಂಸದೀಯ ಪಟುವನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ದೇವರು ಸದ್ಗತಿ ನೀಡಲಿ. ಅವರ ಕುಟುಂಬ, ಬಂಧುಮಿತ್ರರಿಗೆ ಅವರ ನಿಧನದ ಆಘಾತವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ಕಟೀಲ್ ಅವರು ಪ್ರಾರ್ಥಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








