ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಂತಾಮಣಿ ತಾಲೂಕಿನ ಶ್ರೀ ಕ್ಷೇತ್ರ ಕೈವಾರ ಯೋಗಿನಾರೇಯಣ ದೇವಾಲಯಕ್ಕೆ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಬರದ ನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿ, ಕೆರೆಗಳ ಕೋಡಿ ಹರಿಯಲಿ. ನೆರೆಪೀಡಿತ ಜಿಲ್ಲೆಗಳಲ್ಲಿ ಮಳೆ ಕಡಿಮೆ ಆಗಲಿ ಎಂದು ಕೈವಾರ ತಾತಯ್ಯನವರ ದೇವಾಲಯದಲ್ಲಿ ಪ್ರಾರ್ಥನೆ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.
ಬಳಿಕ ಸಚಿವ ಸುಧಾಕರ್, ಚಿಂತಾಮಣಿ ತಾಲೂಕಿನ ಬೊಮ್ಮೇಕಲ್ಲು, ಬ್ಯಾಲಹಳ್ಳಿ ಹಾಗೂ ಚಿಕ್ಕಪುರ ಗ್ರಾಮಗಳಿಗೆ ಭೇಟಿ ನೀಡಿ 18 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿದರು.








