ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ಸುಪ್ರೀಂ ಒಪ್ಪಿಗೆ
ಬೆಂಗಳೂರು, ಜೂನ್ 17: ಎಸ್.ಎಸ್.ಎಲ್.ಸಿ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸಿದರೆ ವಿದ್ಯಾರ್ಥಿಗಳಿಗೆ ಸೋಂಕು ತಗುಲಬಹುದೆಂಬ ಭೀತಿಯಿಂದ ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಸುಪ್ರೀಂಕೋರ್ಟ್ ಗೆ ಪರೀಕ್ಷೆ ನಡೆಸುವುದು ಬೇಡ ಎಂದು ಮೊರೆ ಹೋಗಿದ್ದರು. ಆದರೆ ಸುಪ್ರೀಂಕೋರ್ಟ್ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಹಿಂದೆ ರಾಜ್ಯದ ಹೈಕೋರ್ಟ್ ನೀಡಿದ್ದ ಆದೇಶವನ್ನೇ ಎತ್ತಿ ಹಿಡಿದಿದೆ.
ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಈ ಮೊದಲು ಕೊರೊನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ರದ್ದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾ. ನಾಗೇಶ್ವರ್ ರಾವ್ ನೇತೃತ್ವದ ತ್ರಿ ಸದಸ್ಯ ಪೀಠ ಪರೀಕ್ಷೆ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂಕೋರ್ಟ್ ಸಹ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಸಿರು ನಿಶಾನೆ ತೋರಿಸಿರುವ ಹಿನ್ನಲೆಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಎಸ್.ಎಸ್.ಎಲ್.ಸಿ ಪರೀಕ್ಷೆ ಅಭಾದಿತವಾಗಿ ನಡೆಯಲಿದೆ. ಜೂನ್ 25 ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದೆ.