ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಕೋಮುವಾದಿ ಹಾಗೂ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ತನಿಖೆ ನಡೆಸುವ ಸಲುವಾಗಿ ಸುಪ್ರೀಂಕೋರ್ಟ್ ವಿಶೇಷ ತನಿಖಾ ತಂಡ (SIT) ರಚಿಸಲು ಮಧ್ಯಪ್ರದೇಶ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ. ಸಚಿವ ಕುನ್ವರ್ ವಿಜಯ್ ಶಾ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ ಸಿಂಗ್ ಅವರ ಪೀಠವು, ಪ್ರಕರಣವನ್ನು ಸದೃಢವಾಗಿ ಅನಾವರಣಗೊಳಿಸುವ ನಿಟ್ಟಿನಲ್ಲಿ ನಿಷ್ಪಕ್ಷಪಾತ ತನಿಖೆ ಅತಿ ಅವಶ್ಯಕ ಎಂದು ಸಲಹೆ ನೀಡಿ, ನಾಳೆಯೊಳಗೆ ಮೂವರು ಹಿರಿಯ ಐಪಿಎಸ್‌ಗಳನ್ನು ಸೇರಿಸಿ ಎಸ್ಐಟಿ ರಚಿಸುವಂತೆ ಆದೇಶಿಸಿದೆ.
ಆಪರೇಷನ್ ಸಿಂಧೂರ’ ಕುರಿತು ಜಗತ್ತಿಗೆ ತಿಳಿಸಿದ್ದ ಕರ್ನಲ್ ಸೋಫಿಯಾ ಖುರೇಷಿ ಕುರಿತು ಮಧ್ಯಪ್ರದೇಶ ಸಚಿವ ವಿಜಯ್ ಶಾ ನೀಡಿದ್ದ ವಿವಾದಾತ್ಮಕ ಹೇಳಿಕೆಯಿಂದ ರಾಷ್ಟ್ರವೇ ತಲೆ ತಗ್ಗಿಸುವಂತೆ ಆಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಜನಪ್ರತಿನಿಧಿಯು ಸಾರ್ವಜನಿಕವಾಗಿ ಮಾತನಾಡುವಾಗ ಪ್ರತಿ ಶಬ್ದದ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.








